ಕರ್ನಾಟಕ

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಯಲ್ಲಿ ವಿಳಂಬ: ಸರಕಾರದ ವಿರುದ್ಧ ವಿಧಾನಪರಿಷತ್‌ನಲ್ಲಿ ಬಿಜೆಪಿ ಆಕ್ರೋಶ

Pinterest LinkedIn Tumblr

bjpಬೆಳಗಾವಿ(ಸುವರ್ಣವಿಧಾನಸೌಧ), ಡಿ.9: ರಾಜ್ಯ ಸರಕಾರವು ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಹಣ ಕೊಡಿಸುವಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮಂಗಳವಾರ ಸದನ ಆರಂಭಗೊಳ್ಳುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಬಳಿಕ 15 ನಿಮಿಷಗಳ ಕಾಲ ಸದನವನ್ನು ಮುಂದೂಡಲಾಯಿತು. ಸದನ ಮತ್ತೆ ಆರಂಭಗೊಳ್ಳುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಕಬ್ಬುಬೆಳೆಗಾರರಿಗೆ ಬಾಕಿ ಪಾವತಿಸುವಲ್ಲಿ ಸರಕಾರ ನಿರ್ಲಕ್ಷ್ಯ ತೋರಿದೆ. ಇದರಿಂದಾಗಿ, ರೈತರು ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ, ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಮೊದಲು ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಇದರಿಂದ, ಕೆಲಕಾಲ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಂತಾಪ ಸೂಚನೆಯ ಬಳಿಕ ಸದನದ ಸಂಪ್ರದಾಯದಂತೆ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡು, ಬಳಿಕ ವಿಷಯ ಮಂಡಣೆಗೆ ಅವಕಾಶ ನೀಡಲಾಗುವುದು ಎಂದರು.

ಸಭಾಪತಿಯ ಮನವಿಗೆ ಸ್ಪಂದಿಸದ ಬಿಜೆಪಿ ತನ್ನ ನಿಲುವಿಗೆ ಅಂಟಿಕೊಂಡಿತು. ಇದರಿಂದಾಗಿ, ಸದನವನ್ನು 10 ನಿಮಿಷ ಮುಂದೂಡಲಾಯಿತು. ಸಭಾನಾಯಕ ಎಸ್.ಆರ್.ಪಾಟೀಲ್, ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪರನ್ನು ತಮ್ಮ ಕೊಠಡಿಗೆ ಕರೆಸಿಕೊಂಡು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಕೋರಿದರು.

ಸದನ ಪುನಃ ಸಮಾವೇಶಗೊಳ್ಳುತ್ತಿದ್ದಂತೆ ಈಶ್ವರಪ್ಪ ಎದ್ದುನಿಂತು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವರ್ಷ ಬೆಳಗಾವಿ ಅಧಿವೇಶನದಲ್ಲಿ ರೈತರಿಗೆ ಪ್ರತೀ ಟನ್ ಕಬ್ಬಿಗೆ 2,650 ರೂ. ಕೊಡಿಸುತ್ತೇವೆ. ಸರಕಾರದ ತೀರ್ಮಾನವನ್ನು ಧಿಕ್ಕರಿಸುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಆದರೆ, ಈವರೆಗೆ ಕಬ್ಬುಬೆಳೆಗಾರರಿಗೆ ನಿಗದಿತ ಹಣವನ್ನು ಕೊಡಿಸಲಿಲ್ಲ ಎಂದರು.

ಕಳೆದ ವರ್ಷ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಮತ್ತಷ್ಟು ರೈತರು ಸಾವನ್ನಪ್ಪಬೇಕು ಎಂದು ಸರಕಾರ ಕಾಯುತ್ತಿದೆಯೇ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಕೂಗು ಸರಕಾರಕ್ಕೆ ಕೇಳುತ್ತಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿರುವ ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಭಾನಾಯಕ ಎಸ್.ಆರ್.ಪಾಟೀಲ್, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ನಡೆಸಲು ಬಿಜೆಪಿಗೆ ಆಸಕ್ತಿಯಿಲ್ಲ. ಆದುದರಿಂದ, ಪ್ರಚಾರಕ್ಕಾಗಿ ಈ ರೀತಿಯ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರಕಾರವು ಪ್ರತಿಪಕ್ಷಗಳು ಪ್ರಸ್ತಾಪಿಸುವ ಎಲ್ಲ ವಿಷಯಗಳ ಬಗ್ಗೆ ಸಮರ್ಪಕ ಉತ್ತರ ನೀಡಲು ಸಿದ್ಧವಿದೆ. ಪ್ರತಿಭಟನೆಗಳನ್ನು ಬಿಟ್ಟು ಸದನದಲ್ಲಿ ಚರ್ಚೆ ಮೂಲಕ ಪರಿಹಾರ ಕಂಡುಕೊಳ್ಳೋಣ ಎಂದರು.

ಪೊಲೀಸರನ್ನು ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಸರಕಾರ ಮಾಡುತ್ತಿದೆ. ರೈತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಸರಕಾರ ಅವರ ಹಿತವನ್ನು ಕಾಪಾಡದೆ, ಸಕ್ಕರೆ ಕಾರ್ಖಾನೆ ಮಾಲಕರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಗದ್ದಲ ಮುಂದುವರಿದಿದ್ದರಿಂದ, ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

Write A Comment