ಬೆಂಗಳೂರು,ಮಾ.17: ನಿಗೂಢವಾಗಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಡಿ.ಕೆ.ರವಿ ಅವರ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತರ ಅಂತಿಮ ದರ್ಶನ ಪಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಸದ್ಯದಲ್ಲೇ ರವಿ ಸಾವಿನ ಕುರಿತು ಸತ್ಯಾಂಶ ಹೊರಬರಲಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು ಎಂದು ಆಶ್ವಾಸನೆ ಕೊಟ್ಟರು. ನಗರ ಪೊಲೀಸ್ ಆಯುಕ್ತರು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದ ಬಳಿಕ ರವಿ ಸಾವಿನ ಬಗ್ಗೆ ಎದ್ದಿರುವ ಎಲ್ಲಾ ಊಹಾಪೋಹಗಳಿಗೂ ಉತ್ತರ ದೊರೆಯಲಿದೆ. ಸರ್ಕಾರ ಇದನ್ನು ನಿಷ್ಪಕ್ಷಪಾತದಿಂದ ತನಿಖೆ ನಡೆಸುವುದರ ಮೂಲಕ ರವಿಯವರ ಆತ್ಮಕ್ಕೆ ಶಾಂತಿ ದೊರಕಿಸಿ ಕೊಡುವುದಾಗಿ ತಿಳಿಸಿದರು.
ರವಿಯೊಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದರಿಂದಲೇ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಅವರನ್ನು ವಾಣಿಜ್ಯ ಇಲಾಖೆಯ ಜಾಗೃತ ದಳದ ಹೆಚ್ಚುವರಿ ಆಯುಕ್ತ ಸ್ಥಾನಕ್ಕೆ ವರ್ಗಾವಣೆ ಮಾಡಲಾಯಿತು. ಇರುವಷ್ಟು ದಿನ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರ ಒಬ್ಬ ಪ್ರಾಮಾಣಿಕ ಅಧಿಕಾರಿಯನ್ನು ಕಳೆದುಕೊಂಡಿದೆ. ಅವರು ಎಲ್ಲೇ ಕೆಲಸ ಮಾಡಿದ್ದರೂ ಪ್ರಾಮಾಣಿಕವಾಗಿಯೇ ಕೆಲಸ ನಿರ್ವಹಿಸಿದ್ದರು. ಆದರೆ ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ಮಾತ್ರ ಹೊರಬೀಳಲಿದೆ ಎಂದರು. ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಗಮಿಸಿದರು.