ಬೆಂಗಳೂರು, ಮಾ.18: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ತುಮಕೂರು ಮೂಲದ ಮಧುಸೂದನ್ ಎಂಬುವವರು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದಾರೆ. ಡಿ.ಕೆ.ರವಿ ಅವರ ಸಾವಿನ ಹಿಂದೆ ಮಾಫಿಯಾ ಅವರ ಕೈವಾಡವಿದೆ. ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಕೈವಾಡವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಈ ಪತ್ರವನ್ನು ಪಿಐಎಲ್ ಎಂದು ಪರಿಗಣಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಡಿ.ಕೆ.ರವಿ ಅವರ ಸಾವಿನ ಪ್ರಕರಣ ಈಗ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಪ್ರತಿಪಕ್ಷಗಳು ಕಳೆದೆರಡು ದಿನಗಳಿಂದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ಈಗ ಮಧುಸೂದನ್ ಅವರು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿರುವುದು ಪ್ರಕರಣ ಹೊಸ ತಿರುವು ಪಡೆಯುವ ಸಾಧ್ಯತೆ ಇದೆ.