ಬೆಂಗಳೂರು, ಎ.27: ಹಿಮಾಲಯ ತಪ್ಪಲಿನಲ್ಲಿರುವ ನೇಪಾಳ ಹಾಗೂ ಉತ್ತರ ಭಾರತದ ರಾಜ್ಯಗಳಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಸೋಮವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಂತ್ರಸ್ತರ ನೆರವಿಗೆ ತಿಂಗಳ ವೇತನ: ನೇಪಾಳದ ಭೂಕಂಪ ಪೀಡಿತರ ನೆರವಿಗಾಗಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದ ಸ್ಯರು ತಮ್ಮ ಒಂದು ತಿಂಗಳ ವೇತನ ನೀಡಲು ತೀರ್ಮಾನಿಸಿದ್ದಾರೆ ಎಂದು ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್ ಪ್ರಕಟಿಸಿದರು.
ಸೋಮವಾರ ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷ ಎಚ್.ಎನ್.ಶಿವಶಂಕರ ರೆಡ್ಡಿ ಮಂಡಿಸಿದ ಸಂತಾಪ ಸೂಚಕ ನಿರ್ಣಯ ಬೆಂಬಲಿಸಿ ಮಾತನಾಡಿದ ಶ್ರೀನಿವಾಸ ಪ್ರಸಾದ್, ನೇಪಾಳದ ಪ್ರಬಲ ಭೂಕಂಪದಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.
ಎಂಟು ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಭೂಕಂಪನವಾಗಿದ್ದು, ಲಕ್ಷಾಂತರ ಮಂದಿ ಮನೆ-ಮಾರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮಾನವೀಯ ದೃಷ್ಟಿಯಿಂದ ಅವರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಹೇಳಿದರು.