ಕರ್ನಾಟಕ

ಪಕ್ಷ ವಿರೋಧಿ ಚಟುವಟಿಕೆ ; ದೇವರಹಿಪ್ಪರಗಿ ಶಾಸಕ ನಡಹಳ್ಳಿ ಕಾಂಗ್ರೆಸ್ ನಿಂದ ಉಚ್ಚಾಟನೆ ?

Pinterest LinkedIn Tumblr

nadahalli

ಬೆಂಗಳೂರು, ಮೇ 19: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಕರ್ನಾಟಕ ವಿಭಜನೆಯ ಕೂಗೆತ್ತಿದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಹೆಚ್ಚಾಗಿದೆ.

ಈ ಬಗ್ಗೆ ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಶಾಸಕ ನಡಹಳ್ಳಿ ಅವರನ್ನು ಉಚ್ಚಾಟಿಸಬೇಕೇ, ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುವ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಶಾಸಕ ನಡಹಳ್ಳಿ ಅವರು ಕಾಂಗ್ರೆಸ್ ಪಕ್ಷಕ್ಕೆ, ನಾಯಕರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರ ಆಗುವಂತಹ ಹೇಳಿಕೆಗಳನ್ನು ನೀಡುತ್ತಿದ್ದರು. ಅಲ್ಲದೆ ಅಖಂಡ ಕರ್ನಾಟಕವನ್ನು ವಿಭಜನೆ ಮಾಡಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿತ್ತು.

ಅಲ್ಲದೆ ನೋಟಿಸ್ ಕೂಡ ನೀಡಲಾಗಿತ್ತು. ನೋಟಿಸ್‌ಗೆ ಅವರು ಈವರೆಗೂ ಉತ್ತರವನ್ನು ನೀಡಿಲ್ಲ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳನ್ನೂ ನಿಲ್ಲಿಸಲಿಲ್ಲ. ಈ ಕಾರಣಗಳಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ.
ಹೈಕಮಾಂಡ್ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವ ಸಂಬಂಧ ಕೆಪಿಸಿಸಿ ಅಧ್ಯಕ್ಷರು ದಿಗ್ವಿಜಯ್‌ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಹೈಕಮಾಂಡ್ ಅನುಮತಿ ಕೊಟ್ಟರೆ ಎಸ್.ಎಸ್.ಪಾಟೀಲ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಶಾಸಕ ನಡಹಳ್ಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟನ್ನು ಆಕ್ಷೇಪಿಸಿದ್ದರು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ನಾಯಕರ ವಿರುದ್ಧ ಮುಜುಗರ ತರುವ ಹೇಳಿಕೆಗಳನ್ನು ನೀಡಿದ್ದರು. ಗೋವಾ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಪರವಾಗಿ ಪ್ರತಿಭಟನೆ ನಡೆಸಿ ನಂತರ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಮಾತುಕತೆ ನಡೆಸಿದ್ದರು.
ಅಮಾನತುಗೊಂಡ ನಂತರವೂ ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಿಲ್ಲಿಸಿರಲಿಲ್ಲ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ಉಪಯೋಗವಿಲ್ಲ. ಈ ಭಾಗದಲ್ಲಿ ಮತ್ತೊಂದು ವಾಣಿಜ್ಯ ಮಂಡಳಿ ತೆರೆಯಬೇಕೆಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯೂ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

Write A Comment