ಕರ್ನಾಟಕ

ಜಯಲಲಿತಾ ಪ್ರಕರಣ : ಕಾನೂನು ಇಲಾಖೆ ವರದಿ ನಂತರ ಮೇಲ್ಮನವಿ ಕುರಿತು ನಿರ್ಧಾರ: ಸಿಎಂ

Pinterest LinkedIn Tumblr

siddaramaih7

ನವದೆಹಲಿ, ಮೇ 23: ಜಯಲಲಿತಾ ಪ್ರಕರಣದಲ್ಲಿ ಕಾನೂನು ಇಲಾಖೆ ವರದಿ ಸ್ವೀಕರಿಸಿದ ಬಳಿಕ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೆ ಬೇಡವೇ ಎಂಬ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎರಡು ದಿನಗಳ ಪ್ರವಾಸಕ್ಕಾಗಿ ದೆಹಲಿಗೆ ಭೇಟಿ ನೀಡಿದ ಅವರು ಇಂದು ಬೆಳಗ್ಗೆ ಸುದ್ದಿಗಾರರ ಜೊತೆ ಮಾತನಾಡಿದರು.

ಜಯಲಲಿತಾ ಪಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ತೀರ್ಪಿನ ಸಾರಾಂಶಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಅನಂತರ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಬೇಡವೇ ಎಂಬ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಯಲಲಿತಾ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪ ಕುರಿತು ಕರ್ನಾಟಕದಲ್ಲಿ ವಿಚಾರಣೆ ನಡೆಸಿದ ಸಿಬಿಐನ ವಿಶೇಷ ನ್ಯಾಯಾಲಯ ಜಯಲಲಿತಾ ಹಾಗೂ ಇತರ ಮೂವರನ್ನು ದೋಷಿ ಎಂದು ತೀರ್ಪು ನೀಡಿತ್ತು. ನಂತರ ಸಲ್ಲಿಕೆಯಾದ ಮೇಲ್ಮನವಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿ ಜಯಲಲಿತಾರನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕು ಎಂದು ದೂರುದಾರ ಸುಬ್ರಹ್ಮಣ್ಯ ಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಿರ್ದೋಷಿ ಎಂದು ಹೈಕೋರ್ಟ್ ತೀರ್ಪಿನ ಬಳಿಕ ಜಯಲಲಿತಾ ಇಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ದನೆ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಜಯಲಲಿತಾ ಪ್ರಕರಣ : ಸುಪ್ರಿಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

Eshwarappa-K-S

ಮೈಸೂರು, ಮೇ 23: ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ ಹಾಗಾಗಿ ಭ್ರಷ್ಟಾಚಾರದ ವಿರುದ್ಧ ನಿಲ್ಲುತ್ತಿಲ್ಲ ಎಂಬ ಸಂದೇಶ ರವಾನೆಯಾಗುತ್ತದೆ ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿ ಎಂದರು. ಜಯಲಲಿತಾರವರ ಹಗರಣ ಸಣ್ಣ ಪುಟ್ಟ ಹಗರಣವಲ್ಲ, ಸಾವಿರಾರು ಕೋಟಿ ರೂ.ಗಳ ಹಗರಣವಾಗಿದ್ದು ಭ್ರಷ್ಟಾಚಾರ ನಡೆಸಿದವರಿಗೆ ಶಿಕ್ಷೆಯಾದರೆ ಭ್ರಷ್ಟಾಚಾರಿಗಳಿಗೆ ಪಾಠ ಕಲಿಸಿದಂತಾಗುತ್ತದೆ. ಇಲ್ಲದಿದ್ದರೆ ಭ್ರಷ್ಟಾಚಾರಿಗಳು ಹೆದರದೆ ಮತ್ತಷ್ಟು ಹಗರಣಗಳನ್ನು ಮಾಡುತ್ತಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಏಕೆ ಮೀನಾಮೇಷ ಎಣಿಸುತ್ತಿದೆ ಎಂದು ಪ್ರಶ್ನಿಸಿದ ಅವರು ಕಾನೂನು ತಜ್ಞರು ಈಗಾಗಲೇ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಮೇಲ್ಮನವಿ ಸಲ್ಲಿಸಬಹುದೆಂದು ತಿಳಿಸಿದ್ದಾರೆ. ಹಾಗಿದ್ದೂ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು. ರಾಜ್ಯ ಸರ್ಕಾರಕ್ಕೆ ಇನ್ನು ಮೂರು ವರ್ಷಗಳ ಅವಧಿ ಬಾಕಿ ಇರುತ್ತದೆ. ಕಳೆದ 2 ವರ್ಷಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಮಾತ್ರ ಶೂನ್ಯ ಉಳಿದ ಮೂರು ವರ್ಷಗಳಲ್ಲಿ ಕೆಲಸ ಮಾಡಲು ಸಾಧ್ಯವಾದರೆ ಮಾಡಲಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಟೀಕಿಸಿದರು. ಸಿದ್ದರಾಮಯ್ಯನವರಿಗೆ ಅಧಿಕಾರ ಸಿಕ್ಕಿರುವುದು ಒಂದು ಅದೃಷ್ಟ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾರೂ ಇಲ್ಲ ಅವರು ಒಬ್ಬೊಂಟಿಯಾಗಿದ್ದಾರೆ. ತಮ್ಮ ಸಚಿವ ಸಂಪುಟವನ್ನು ನಿಭಾಯಿಸಲು ಆಗುತ್ತಿಲ್ಲ ಎಂದರು.

Write A Comment