ಕರ್ನಾಟಕ

ಒಂದಂಕಿ ಲಾಟರಿ ಹಗರಣ: ಸಿಬಿಐ ತನಿಖೆಗೆ ಸಿಎಂ ಆದೇಶ

Pinterest LinkedIn Tumblr

sidd4

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆದೇಶಿಸಿದ್ದಾರೆ.

ಈ ಸಂಬಂಧ ಇಂದು ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಲಾಟರಿ ಹಗರಣ ಸಿಬಿಐಗೆ ಕೊಡುವಂತ ಪ್ರಕರಣ ಅಲ್ಲ. ಆದರೂ ಸಾರ್ವಜನಿಕರಿಗೆ ಸಂಶಯ ಬರಬಾರದು ಎಂಬ ಉದ್ದೇಶದಿಂದ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿದೆ ಎಂದರು.

2007ರಿಂದ ರಾಜ್ಯದಲ್ಲಿ ಲಾಟರಿ ನಿಷೇಧಿಸಲಾಗಿದೆ. ಆದರೂ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಎಲ್ಲಾ ಮುಖ್ಯಮಂತ್ರಿಗಳ ಕಾಲದಲ್ಲೂ ರಾಜ್ಯದಲ್ಲಿ ಲಾಟರಿ ದಂಧೆ ನಡೆಯುತ್ತಿದೆ. ಇದು ಹೊಸದೇನಲ್ಲ ಎಂದರು.

ಲಾಟರಿ ದಂಧೆ ಬಗ್ಗೆ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸಿಲ್ಲ. ಸಿಐಡಿ ವರದಿಯನ್ನು ಆಧರಿಸಿ ಐಜಿಪಿ ಮಟ್ಟದ ಅಧಿಕಾರಿಯನ್ನು ಅಮಾನತುಗೊಳಿಸಿದ್ದೇವೆ. ನಮ್ಮ ಸರ್ಕಾರ ಯಾರನ್ನು ರಕ್ಷಣೆ ಮಾಡಬೇಕಾದ ಅಗತ್ಯ ಇಲ್ಲ. ಯಾವ ಕೇಸಲ್ಲೂ ಪೊಲೀಸರಿಗೆ ಫೋನ್ ಮಾಡಲ್ಲ. ನನ್ನ ರಾಜಕೀಯ ಜೀವನದಲ್ಲಿ ನಾನು ಯಾರ ಮೇಲೂ ಪ್ರಭಾವ ಬೀರಿಲ್ಲ ಎಂದರು.

ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ದೇವೇಗೌಡರು ನಾನು ಮತ್ತು ಗೃಹ ಸಚಿವರು ಭಾಗಿಯಾಗಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಒಬ್ಬ ಮಾಜಿ ಪ್ರಧಾನಿಯಾಗಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಕಳೆದ ಎರಡು ವರ್ಷದಲ್ಲಿ ಡಿ.ಕೆ.ರವಿ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ನಾವು ಸಿಬಿಐಗೆ ವಹಿಸಿದ್ದೇವೆ. ಆದರೆ ಬಿಜೆಪಿ ಸರ್ಕಾರವಿದ್ದಾಗ ಐದು ವರ್ಷಗಳಲ್ಲಿ ಒಂದೂ ಪ್ರಕರಣವನ್ನು ಸಿಬಿಐಗೆ ಕೊಡಲಿಲ್ಲ. ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರು ಸಿಬಿಐ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದರು. ಆದರೆ ಈಗ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎಂದರು.

Write A Comment