ಕರ್ನಾಟಕ

ಯಡಿಯೂರಪ್ಪನವರಿಗೆ ನನ್ನ ಹಾಗೂ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ: ಯಡ್ಡಿಗೆ ಸಿದ್ದು ತಿರುಗೇಟು

Pinterest LinkedIn Tumblr

siddu-yaddi

ಮೈಸೂರು, ಜೂ.8: ಸರಿಯಾಗಿ ಸರ್ಕಾರ ನಡೆಸಿದ್ರೆ ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವ ಅವರು ಮಾಡುತ್ತಿರುವ ಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಡುಗಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದೆ. ಇತ್ತೀಚೆಗೆ ನಡೆದ ಗ್ರಾ.ಪಂ.ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿದ್ದಾರೆ. ಇದರಿಂದ ಹತಾಶರಾಗಿರುವ ಯಡಿಯೂರಪ್ಪನವರು ಸೋಲನ್ನೊಪ್ಪಿಕೊಳ್ಳಲಾಗದೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಪ್ರಸ್ತುತ ಜಿಡಿಪಿ (ಆರ್ಥಿಕ ಪ್ರಗತಿ) ಆಧಾರದ ಮೇಲೆ ಕೆಲವು ಯೋಜನೆಗಳಿಗಾಗಿ ಸಾಲ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ಅಚ್ಚರಿ ಪಡುವಂತಹ ವಿಷಯವಿಲ್ಲ. ಹಿಂದೆ ಇದ್ದ ಎಲ್ಲಾ ಸರ್ಕಾರಗಳು ಸಹ ಈ ನೀತಿಯನ್ನು ಅನುಸರಿಸುತ್ತಿದ್ದವು. ನಾವು ಶೇ. 24ರ ಮಿತಿಯನ್ನು ಕಾಯ್ದುಕೊಂಡಿದ್ದೇವೆ. ಆದರೂ ಇದನ್ನು ತಿಳಿದುಕೊಳ್ಳದೆ ಸುಮ್ಮನೆ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಯಡಿಯೂರಪ್ಪನವರಿಗೆ ನನ್ನ ಹಾಗೂ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ, ಸುಮ್ಮನೆ ಟೀಕೆಗಳನ್ನು ಮಾಡುವುದನ್ನು ಬಿಟ್ಟು ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡಬೇಕು ಎಂದು ತಿಳಿಸಿದ್ದಾರೆ.

ತಿಂಗಳೊಳಗೆ ಘೋಷಣೆ
ಬಹುತೇಕ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ನಾಲ್ಕೈದು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಇದಕ್ಕೆ ಸದಸ್ಯರು, ನಿರ್ದೇಶಕರನ್ನು ನೇಮಕ ಮಾಡುವ ಕುರಿತಂತೆ ಚರ್ಚೆ ನಡೆದಿದ್ದು, ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಮಾತುಕತೆ ಪೂರ್ಣಗೊಳಿಸಿ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪಟ್ಟಿ ಕೂಡ ಅಂತಿಮಗೊಂಡಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ವಿಳಂಬ :
ಸಂಪುಟ ಪುನರ್ ರಚನೆ ಕುರಿತಂತೆ ಸೋನಿಯಾ ಗಾಂಧಿಯವರ ಜೊತೆ ಚರ್ಚೆ ನಡೆಸಲಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರಚನೆ ಮಾಡುವ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ. ಇಂದು ದೆಹಲಿಗೆ ತಲುಪಿ ನಾಳೆ ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಂಡು ನಂತರ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದ ವಿಚಾರದ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಗ್ರಾ.ಪಂ.ಯಿಂದ ಆಯ್ಕೆಯಾದ ಕೆಲ ಸದಸ್ಯರು ಸಿಎಂ ಅವರಿಗೆ ಹೂವಿನ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು.

ಸರ್ಕಾರಕ್ಕೆ ನೈತಿಕತೆ ಇಲ್ಲ : ಬಿಎಸ್‌ವೈ ಗುಡುಗು

ಬೆಂಗಳೂರು, ಜೂ.8: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಒಂದಂಕಿ ಲಾಟರಿ, ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ತೊಡಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿ ಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಪೊಲೀಸರಿಗೆ ನೈತಿಕತೆ ಇಲ್ಲದಂತಾಗಿದೆ. ಪೊಲೀಸರು ಹಗರಣದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಬಗ್ಗೆ ದನಿ ಎತ್ತುವ ಪ್ರತಿ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು. ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸರ್ಕಾರ ಮುಚ್ಚಿಹಾಕುವ ಪ್ರಯತ್ನವನ್ನು ಮಾಡುತ್ತಿದೆ. ಈ ಪ್ರಕರಣ ಸಂಬಂಧ 47 ಜನರ ವಿರುದ್ಧ ವಿನಾ ಕಾರಣ ದೂರು ದಾಖಲಿಸಿದ್ದಾರೆ ಎಂದು ಬಿಎಸ್‌ವೈ ಆರೋಪಿಸಿದರು.

Write A Comment