ನವದೆಹಲಿ, ಆ.11: ಲೋಕಸಭೆಯಲ್ಲಿಂದು ಮತ್ತೆ ಸಂಸದ ಯಡಿಯೂರಪ್ಪ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರೈತರ ಆತ್ಮಹತ್ಯೆ ತಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಎಡವಿದ್ದು, ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರೈತರ ಆತ್ಮಹತ್ಯೆ ತಡೆಯಲು ವಿಶೇಷ ಯೋಜನೆ ತರಬೇಕು ಎಂದು ಕನ್ನಡದಲ್ಲೇ ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕ ಸರ್ಕಾರ ರೈತರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಸಾಲಮನ್ನಾ ಮಾಡಿ ರೈತರಿಗೆ ಆತ್ಮಸ್ಥೈರ್ಯ ಮೂಡಿಸಿದ್ದೆ. ಆದರೆ, ಇಂದು ಸರಣಿ ಆತ್ಮಹತ್ಯೆ ನಡೆಯುತ್ತಿದ್ದರೂ ಸಿಎಂ ಸಿದ್ದರಾಮಯ್ಯ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಅರ್ಧಭಾಗಕ್ಕೂ ಹೆಚ್ಚು ಪ್ರದೇಶಗಳಲ್ಲಿ ಬರವಿದ್ದು, ಕೂಡಲೇ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತರ ಬಡ್ಡಿ ಮನ್ನಾ ಮಾಡಬೇಕು ಎಂದು ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಒತ್ತಾಯಿಸಿದರು. ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲೂ ಜನಪರ ವಿಷಯಗಳ ಬಗ್ಗೆ ಚರ್ಚಿಸದೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡದೆ ಕೇವಲ ಕಾಲಹರಣ ಮಾಡುತ್ತಿದ್ದಾರೆ ಎಂದು ಕೂಡ ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆಯವರ ವರ್ತನೆಯನ್ನು ಟೀಕಿಸಿದರು.