ಬೆಂಗಳೂರು, ಆ.26: ರಾಜ್ಯದಲ್ಲಿ ಯಾರೊಬ್ಬರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಅನೈತಿಕ ಪೊಲೀಸ್‌ಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣದ ಸಂಬಂಧ ಈಗಾಗಲೇ 13 ಮಂದಿಯನ್ನು ಬಂಧಿಸಲಾ ಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡರೆ ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾನೂ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇವೆ ಎಂದು ಜಾರ್ಜ್ ಸ್ಪಷ್ಟಪಡಿಸಿದರು.
ಒಂದು ಕೋಮಿನ ಯುವತಿಯೊಂದಿಗೆ ಮತ್ತೊಂದು ಕೋಮಿನ ಯುವಕ ಮಾತನಾಡುತ್ತಿದ್ದನೆಂಬ ನೆಪದಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ಯುವಕನನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಮನಸೋ ಇಚ್ಛೆ ಥಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸುಮ್ಮನೆ ಕೂರಲು ಆಗದು: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಭಟನೆ ನೆಪದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಜಾರ್ಜ್ ಎಚ್ಚರಿಕೆ ನೀಡಿದರು.
ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಬದ್ಧ. ಈ ಹೋರಾಟಕ್ಕೆ ಸರಕಾರದ ಬೆಂಬಲವೂ ಇದೆ. ಹೀಗಾಗಿ ಸರಕಾರ ತನ್ನೆಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ಆದರೆ, ಈ ವಿಚಾರವೊಂದು ಭಾವನಾತ್ಮಕ ಸಂಗತಿಯಾಗಿದ್ದು, ಶಾಂತಿಯುತ ಪ್ರತಿಭಟನೆಗೆ ಅಡ್ಡಿ ಇಲ್ಲ. ಆದರೆ, ಸರಕಾರಿ ಬಸ್‌ಗಳಿಗೆ ಬೆಂಕಿ ಸೇರಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದರೆ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.
ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರಾಜ್ಯದ ಕುಡಿಯುವ ನೀರಿಗಾಗಿ ಕೇಳುತ್ತಿದ್ದು, ವಿವಾದ ಬಗೆಹರಿಸಲು ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಾಗಿದೆ ಎಂದ ಅವರು, ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆಂದು ಉಲ್ಲೇಖಿಸಿದರು.
ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರೈತರು ಹಾಗೂ ಸ್ವಾಮೀಜಿಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವರು ಹೋರಾಟದ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರದಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಾರ್ಜ್ ಎಚ್ಚರಿಕೆ ನೀಡಿದರು.
ಕರ್ನಾಟಕ