ಕರ್ನಾಟಕ

ಲೋಡ್‌ಶೆಡ್ಡಿಂಗ್ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Pinterest LinkedIn Tumblr

High_Court_of_Karnatakaಬೆಂಗಳೂರು, ಸೆ.10: ರಾಜ್ಯದಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ವಕೀಲ ಜಿ.ಆರ್.ಮೋಹನ್ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾ.ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ, ಇಂಧನ ಇಲಾಖೆ ಹಾಗೂ ಕೆಪಿಟಿಸಿಎಲ್ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
2010ರಲ್ಲಿ ರಾಜ್ಯದಲ್ಲಿ ಅನಿಯಮಿತ ಲೋಡ್‌ಶೆಡ್ಡಿಂಗ್‌ಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹೊರರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಿ ವಿತರಣೆ ಮಾಡುವುದಾಗಿ ಆಗಿನ ರಾಜ್ಯ ಸರಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. ಅಲ್ಲದೆ, ಕೂಡಂಕುಳಂ, ವೆಲ್ಲೂರು, ಎನ್‌ಎಲ್‌ಸಿ, ತೂತುಕುಡಿ ವಿದ್ಯುತ್ ಘಟಕಗಳಿಂದ ಖರೀದಿ ಮಾಡಿ ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವುದಾಗಿ ತಿಳಿಸಿತ್ತು.
ಅಲ್ಲದೆ, ಕಡಿತವಾಗುವ ಭಾಗಗಳ ವಿವರವನ್ನು ಪ್ರತಿದಿನ ಪತ್ರಿಕಾ ಪ್ರಕಟಣೆಯಲ್ಲಿ ನೀಡುವುದಾಗಿ ತಿಳಿಸಿದೆ. ಆದರೆ, ಪ್ರಸಕ್ತದಲ್ಲಿ ಸಚಿವರಿಂದ ಒಂದು ಪತ್ರಿಕಾಗೋಷ್ಠಿ ನಡೆಸಿ ಅನಿಯಮಿತವಾಗಿ ಲೋಡ್ ಶೆಡ್ಡಿಂಗ್‌ನ್ನು ಜಾರಿ ಮಾಡಲಾಗಿದೆ.
ಇದರಿಂದಾಗಿ ರೈತರು ಹಾಗೂ ಸಾರ್ವಜನಿಕರಿಗೆ ತೀವ್ರತರದ ತೊಂದರೆಯಾಗುತ್ತಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

Write A Comment