ಕರ್ನಾಟಕ

ಕಾಂಗ್ರೆಸ್‌ಗೆ ಮೇಯರ್, ಜೆಡಿಎಸ್‌ಗೆ ಉಪಮೇಯರ್ ಹುದ್ದೆ

Pinterest LinkedIn Tumblr

bbmpಬೆಂಗಳೂರು, ಸೆ.10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟಕ್ಕೆ ಬೆಂಬಲ ಸೂಚಿಸಿರುವ ಎಲ್ಲ ಪಕ್ಷೇತರ ಸದಸ್ಯರಿಗೆ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ.
ಗುರುವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಸಭೆಯಲ್ಲಿ 12 ಸ್ಥಾಯಿ ಸಮಿತಿಗಳ ಪೈಕಿ ಕಾಂಗ್ರೆಸ್‌ಗೆ ಮೂರು, ಜೆಡಿಎಸ್‌ಗೆ ಎರಡು, ಇನ್ನುಳಿದ ಏಳು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಎಸ್‌ಡಿಪಿಐ ಸೇರಿದಂತೆ ಎಲ್ಲ ಪಕ್ಷೇತರ ಸದಸ್ಯರಿಗೆ ನೀಡಲು ಒಪ್ಪಿಗೆ ನೀಡಲಾಗಿದೆ.
ಆರ್ಥಿಕ ಮತ್ತು ತೆರಿಗೆ ಸ್ಥಾಯಿ ಸಮಿತಿ, ಶಿಕ್ಷಣ ಸ್ಥಾಯಿ ಸಮಿತಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಒಲಿದಿದೆ ಎಂದು ತಿಳಿದು ಬಂದಿದೆ. ಸಾಮಾಜಿಕ ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಎಸ್‌ಡಿಪಿಐ ಸದಸ್ಯ ಮುಜಾಹಿದ್ ಪಾಷಾಗೆ ಹಾಗೂ ಇನ್ನುಳಿದಂತೆ ವಾರ್ಡ್ ಕಾಮಗಾರಿ ಸ್ಥಾಯಿ ಸಮಿತಿ, ಲೆಕ್ಕಪತ್ರ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯಗಳ ಸ್ಥಾಯಿ ಸಮಿತಿ, ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಪಕ್ಷೇತರರಿಗೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ಗುಂಡೂರಾವ್, ಶಾಸಕರಾದ ಝಮೀರ್‌ಅಹ್ಮದ್ ಖಾನ್, ಗೋಪಾಲಯ್ಯ, ಅಖಂಡ ಶ್ರೀನಿವಾಸಮೂರ್ತಿ, ಮುನಿರತ್ನ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಯುವ ಕಾಂಗ್ರೆಸ್ ಅಧ್ಯಕ್ಷ ರಿಝ್ವೆನ್ ಅರ್ಶದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Write A Comment