ಮಂಡ್ಯ. ಸೆ.19: ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದವರ ಮೇಲೆ ಕಾನೂನು ಕ್ರಮಕೈಗೊಂಡು ಎಲ್ಲ ಜಿಲ್ಲೆಯಲ್ಲೂ ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ-2015ನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಮಹಿಳಾ, ಮಕ್ಕಳ ಇಲಾಖೆ ಸಚಿವೆ ಉಮಾಶ್ರೀ ಸೂಚಿಸಿದ್ದಾರೆ.
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶನಿವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಮಟ್ಟದಲ್ಲಿ ಮಹಿಳಾ ಸಂರಕ್ಷಣಾ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಬೇಕೆಂದರು.
ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸ್ತ್ರೀಶಕ್ತಿ ಸಂಘದವರು ಅಂತಹವರನ್ನು ಗುರುತಿಸಿ ಪೆನ್ಷನ್ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾಮಾನ್ಯ ವ್ಯಕ್ತಿ ವಿಕಲಚೇತನರನ್ನು ಮದುವೆ ಯಾದರೆ 50,000ರೂ.ಗಳನ್ನು ಮದುವೆಯಾದ ವ್ಯಕ್ತಿಗೆ ಠೇವಣಿ ಇಡಲಾಗುವುದು ಹಾಗೂ ಕಣ್ಣಿಲ್ಲದ ತಾಯಿಗೆ ಹುಟ್ಟಿದ ಮಕ್ಕಳ ಆರೈಕೆಗಾಗಿ ಪ್ರತೀ ತಿಂಗಳು 2,000ರೂ.ಗಳನ್ನು 2 ವರ್ಷ 2 ಮಕ್ಕಳಿಗೆ ನೀಡಲಾಗುವುದು. ಈ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹಾಸನ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅವರು ಸೂಚಿಸಿದರು. ಪೊಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮಕೈಗೊಂಡು ವರದಿ ನೀಡುವಂತೆ ತಿಳಿಸಿದ ಸಚಿವರು, ವಿಶೇಷ ಚಿಕಿತ್ಸಾ ಘಟಕಗಳ ಸರಿಯಾದ ನಿರ್ವಹಣೆಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ಮಾತನಾಡಿ, ತಾಲೂಕು ಮಟ್ಟದಲ್ಲಿ ಸ್ತ್ರೀಶಕ್ತಿ ಭವನಗಳ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಸ್ತ್ರೀಶಕ್ತಿ ಭವನ ಗಳನ್ನು ಸ್ತ್ರೀಶಕ್ತಿ ಗುಂಪುಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಉತ್ಪನ್ನಗಳನ್ನು ತಂದು ವ್ಯಾಪಾರ ಮಾಡಲು ಅನುವು ಮಾಡಿಕೊಡ ಬೇಕೆಂದು ಒತ್ತಾಯಿಸಿದರು.
ಮಕ್ಕಳ ಪೌಷ್ಟಿಕಮಟ್ಟ ವೃದ್ಧಿಸುವಲ್ಲಿ ತಂದೆಯರ ಪಾತ್ರ ಕುರಿತು ಅಪೌಷ್ಟಿಕ ಮಕ್ಕಳ ತಂದೆಯವರಿಗೆ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೇ ರೀತಿಯಲ್ಲಿ ಎಲ್ಲ ಜಿಲ್ಲೆಗಳಲ್ಲೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಅವರು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಕೆ.ಎನ್.ವಿಜಯ ಪ್ರಕಾಶ್, ಅಂಗವಿಕಲರ ಕಲ್ಯಾಣ ಇಲಾಖೆಯ ನಿರ್ದೇಶಕ ಗೋವಿಂದರಾಜು, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಕುಮಾರಿ ಮೊದಲಾದವರು ಉಪಸ್ಥಿತರಿದ್ದರು.
ಮೈಸೂರು ವಿಭಾಗದ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, ಮಹಿಳಾ ಕಲ್ಯಾಣ ಸಮಿತಿಯ ಅಧಿಕಾರಿಗಳು, ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿಗಳು, ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಿದ್ದರು.