ಬೆಂಗಳೂರು, ಸೆ.20: ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಈ ಯೋಜನೆಯ ಬಗ್ಗೆ ಆ ಭಾಗದ ಜನರಿಗೆ ತಿಳಿ ಹೇಳುವುದರಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ್ದಾರೆ.
ರವಿವಾರ ಬೆಂಗಳೂರಿನ ಶಿವರಾಮ ಕಾರಂತ ನಗರದ 2ನೆ ಹಂತದ ನಂದಿನಿ ಲೇಔಟ್ನಲ್ಲಿ ಪತ್ತಿನ ಸಹಕಾರಿ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಜಾರಿಯಾದಲ್ಲಿ ಆ ಭಾಗದ ಪರಿಸರ ಹಾಳಾಗುತ್ತದೆ.ಮೀನುಗಾರಿಕೆಗೆ ತೊಂದರೆಯಾಗುತ್ತದೆ ಎಂಬುದು ಸೇರಿ ಹಲವು ಆತಂಕಗಳನ್ನು ಅಲ್ಲಿನ ಜನತೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ರೀತಿಯ ಯಾವುದೇ ತೊಂದರೆ ಉಂಟಾಗುವುದಿಲ್ಲ. ರಾಜ್ಯ ಸರಕಾರ ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಕಾಂಗ್ರೆಸ್ನ ಮುಖಂಡರಾದ ಜನಾರ್ದನ ಪೂಜಾರಿ ಮತ್ತು ಡಾ.ವೀರಪ್ಪಮೊಯ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಎತ್ತಿನಹೊಳೆ ಯೋಜನೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಕುಡಿಯುವ ನೀರಿನ ವಿಷಯದಲ್ಲಿ ರಾಜಕಾರಣಿಗಳ ಈ ರೀತಿಯ ವರ್ತನೆ ಸರಿಯಲ್ಲ ಎಂದು ಆಕ್ಷೇಪಿಸಿದರು. ಎತ್ತಿನಹೊಳೆ ಯೋಜನೆಯಿಂದ ತುಮಕೂರು, ಬೆಂ.ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನತೆಗೆ ಅನುಕೂಲ ಆಗಲಿದೆ. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನ-ಜಾನುವಾರುಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ. ಯೋಜನೆ ಜಾರಿಯಾದಲ್ಲಿ ಈ ಜಿಲ್ಲೆಗಳ ಜನರ ಕುಡಿಯುವ ನೀರಿನ ಬವಣೆ ನೀಗಲಿದೆ ಎಂದು ಕೇಂದ್ರ ಸಚಿವರು ಹೇಳಿದರು.
ನೀರಿನಲ್ಲಿ ರಾಜಕೀಯ ಬೇಡ:
ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಸಲಹೆ ಸೂಕ್ತವಾಗಿದೆ. ಗೋವಾದಲ್ಲಿ ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದಾಗ ಇದನ್ನು ನ್ಯಾಯಾಧೀಕರಣಕ್ಕೆ ತೆಗೆದುಕೊಂಡು ಹೋಗಲಾಗಿತ್ತು. ಮಹಾರಾಷ್ಟ್ರದಲ್ಲೂ ಆಗ ಕಾಂಗ್ರೆಸ್ ಆಡಳಿತ ನಡೆಸುತ್ತಿತ್ತು. ಆದುದರಿಂದಾಗಿ ಅವರನ್ನು ಕಾಂಗ್ರೆಸ್ನವರು ಒಪ್ಪಿಸಲಿ. ಕುಡಿಯುವ ನೀರಿನ ವಿಷಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ವಿರುದ್ಧ ಅವರು ವಾಗ್ದಾಳಿ ನಡೆಸಿದರು.