ಕರ್ನಾಟಕ

ಕಳಸಾ-ಬಂಡೂರಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್

Pinterest LinkedIn Tumblr

vatalಬೆಂಗಳೂರು, ಸೆ.25: ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಸೆ.26ರಂದು ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬಕ್ರೀದ್ ಹಿನ್ನೆಲೆಯಲ್ಲಿ ಬಂದೋ ಬಸ್ತ್ ಕಲ್ಪಿಸಿದ್ದು, ನಾಳಿನ ಬಂದ್ ಹಿನ್ನೆಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಎಲ್ಲ ವಲಯ ಐಜಿಪಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಎಲ್ಲ ಪೊಲೀಸ್ ಆಯುಕ್ತರುಗಳಿಗೂ ಈಗಾಗಲೇ ಸೂಚನೆ ನೀಡಿದ್ದು, ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಬಂದ್ ಹಿನ್ನೆಲೆಯಲ್ಲಿ ಡಿಎಆರ್, ಕೆಎಸ್ಸಾರ್ಪಿ ಪ್ಲಟೂನ್ ಸೇರಿ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೆ, ರಾಜ್ಯದ ಗಡಿಭಾಗದಲ್ಲಿ ಚೆಕ್‌ಫೋಸ್ಟ್ ನಿರ್ಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದ ಅವರು, ಶಾಂತ ರೀತಿಯಲ್ಲಿ ಬಂದ್ ಆಚರಿಸಲು ಅಡ್ಡಿ ಇಲ್ಲ. ಬಲವಂತದ ಬಂದ್‌ಗೆ ಮುಂದಾದರೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ನಗರದಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದಾದ್ಯಂತ ಹಾಲು, ಆಸ್ಪತ್ರೆ, ತುರ್ತು ಸೇವೆಗಳು, ಆ್ಯಂಬ್ಯುಲೆನ್ಸ್ ಸೇವೆಗಳು ಹಾಗೂ ಔಷಧಿ ಅಂಗಡಿಗಳು ಕಾರ್ಯನಿರ್ವಹಿಸಲಿದೆ.
ಜಿಲ್ಲೆಯಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲೆಗಳ ಡಿಡಿಐಪಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಕೆ.ಎಸ್.ಸತ್ಯಮೂರ್ತಿ ತಿಳಿಸಿದ್ದಾರೆ.
ಆಟೊ, ಖಾಸಗಿ ಕ್ಯಾಬ್ ಚಾಲಕರು ಮತ್ತು ಮಾಲಕರು, ಸರಕು ಸಾಗಣೆ ವಾಹನ ಮಾಲಕರು, ಲಾರಿ ಮಾಲಕ ಸಂಘಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗವಾಗಲಿದೆ. ಸರಕಾರಿ, ಖಾಸಗಿ ಕಚೇರಿಗಳ ದಿನನಿತ್ಯದ ಕೆಲಸ ಕಾರ್ಯಗಳೂ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಂದ್‌ಗೆ ಕರವೇ, ಜಯಕರ್ನಾಟಕ, ರೈತ ಸಂಘಟನೆಗಳು, ವಿವಿಧ ಕನ್ನಡಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಲನಚಿತ್ರ ವಾಣಿಜ್ಯ ಮಂಡಳಿ, ವಕೀಲರ ಸಂಘಗಳು, ಜೆಡಿಎಸ್, ಸಿಐಟಿಯು ಸೇರಿದಂತೆ 1300 ಸಂಘಟನೆಗಳು ಬೆಂಬಲ ಘೋಷಿಸಿವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಪ್ರತಿಭಟನೆಯ ಕಾವು ನೋಡಿಕೊಂಡು ಬಸ್ ಸಂಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನಿರ್ಧರಿಸಿದ್ದು, ಸರಿಯಾದ ಸಮಯಕ್ಕೆ ಬಸ್‌ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್‌ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಚಲನಚಿತ್ರ ಪ್ರದರ್ಶನ ಇರುವುದಿಲ್ಲ. ಬಂದ್ ಕುರಿತು ಮಾತನಾಡಿದ ವಾಟಾಳ್ ನಾಗರಾಜ್, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಕಳಸಾ-ಬಂಡೂರಿ ಕಾಮಗಾರಿಗಾಗಿ ಆಗ್ರಹಿಸಿ ನಡೆಯುತ್ತಿರುವ 71 ದಿನಗಳ ಹೋರಾಟಕ್ಕೆ ಬೆಂಬಲ ನೀಡಲು ಬಂದ್‌ಗೆ ಕರೆ ನೀಡಲಾಗಿದೆ. ಶನಿವಾರ ರಾಜ್ಯದಲ್ಲಿ ಎಲ್ಲವೂ ಬಂದ್ ಆಗಲಿದ್ದು, ರಾಜ್ಯದ ಜನತೆ ಹೋರಾಟಕ್ಕೆ ಕೈ ಜೋಡಿಸಬೇಕು. ಈ ಮೂಲಕ ಗೋವಾ ಸರಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್: ಬಂದ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿಯಲ್ಲಿ ಈಗಾಗಲೇ ಗಣೇಶ ಪ್ರತಿಷ್ಠಾಪನೆ ಹಾಗೂ ಬ್ರಕೀದ್‌ಗೆ ಮಾಡಿರುವ ಬಂದೋಬಸ್ತ್ ಮುಂದುವರಿಯಲಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

Write A Comment