ರಾಯಚೂರು, ಅ.2: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ನಾಲ್ಕು ಬಸ್ಸುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಬಸ್ ಡಿಪೋದಲ್ಲಿ ನಡೆದಿದೆ. ನಾಲ್ಕು ಬಸ್ಸುಗಳು ಬೆಂಕಿಗೆ ಆಹುತಿಯಾಗಿದ್ದು ಅಗ್ನಿಶಾಮಕದಳದವರು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಿದರು.
ರಾಯಚೂರಿಗೆ ಐಐಟಿ ಕೈತಪ್ಪಿದ ಹಿನ್ನೆಲೆಯಲ್ಲಿ ಹೋರಾಟಗಳು ನಡೆಯುತ್ತಿದ್ದು, ಅದರ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಾರಿಗೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ರಾಯಚೂರು ಪಶ್ಚಿಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಬಸ್ ನಿಲ್ದಾಣದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
