ಕರ್ನಾಟಕ

ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆಗೆ ಚಿಂತನೆ : ಗೃಹ ಸಚಿವ ಕೆ.ಜೆ.ಜಾರ್ಜ್

Pinterest LinkedIn Tumblr

K J George_0

ಬೆಂಗಳೂರು, ಅ.2: ಸರಗಳ್ಳತನವನ್ನೇ ವೃತ್ತಿಯಾಗಿಸಿಕೊಂಡಿರುವವರನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಶಿಕ್ಷೆಗೊಳಪಡಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿರುವ ಗಾಂಧಿ ಪ್ರತಿಮೆ ಹಾಗೂ ಲಾಲ್‌ಬಹದ್ದೂರ್‌ಶಾಸ್ತ್ರಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ದಿನೇ ದಿನೆ ಹೆಚ್ಚುತ್ತಿದ್ದು, ಇವರನ್ನು ಶಿಕ್ಷಿಸಲು ಬಲವಾದ ಕಾನೂನಿನಲ್ಲ. ಹಾಗಾಗಿ ಬಂಧಿತರಾದರೂ ಸುಲಭವಾಗಿ ಜಾಮೀನು ಪಡೆದು ಹೊರ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡಾಕಾಯ್ದೆಯಡಿ ಸರಗಳ್ಳರನ್ನು ಬಂಧಿಸಿ ಶಿಕ್ಷೆಗೊಳಪಡಿಸುವ ಸಂಬಂಧ ಉಭಯ ಸದನಗಳಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.

ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರೂ ಸಹ ಸಹಕಾರ ನೀಡುತ್ತಿದ್ದಾರೆ. ಹಾಗಾಗಿ ಇತ್ತೀಚೆಗೆ ಸರಗಳ್ಳರನ್ನು ಪೊಲೀಸರಿಗೆ ಸಾರ್ವಜನಿಕರೇ ಹಿಡಿದುಕೊಟ್ಟಿದ್ದರು. ಜಾಮೀನಿನ ಮೇಲೆ ಹೊರ ಬಂದಿರುವ ಸರಗಳ್ಳರು ಹಾಗೂ ಹೊರ ರಾಜ್ಯಗಳಿಂದ ಬಂದವರ ಮೇಲೆ ನಿಗಾಯಿಡಲಾಗುತ್ತಿದೆ ಎಂದರು. 500 ಪ್ರರಕಣಗಳಲ್ಲಿ 285 ಪ್ರಕರಣಗಳನ್ನು ಭೇದಿಸಲಾಗಿದೆ. ಸರಗಳ್ಳರನ್ನು ಬಂಧಿಸಲು ಹೆಚ್ಚಿನ ನಿಗಾಯಿಡಲಾಗುತ್ತಿದೆ ಎಂದು ತಿಳಿಸಿದರು.

ರಾಘವೇಶ್ವರ ಭಾರತಿ ಶ್ರೀಗಳ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆದು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಈ ಸಂಬಂಧ ರಾಜ್ಯಪಾಲರು ತಮಗೆ ವಿವರಣೆ ಕೇಳಿಲ್ಲ. ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿಗಳಿಗೆ ಕೇಳಿದ್ದರೆ ಅವರು ವಿವರಣೆ ನೀಡುತ್ತಾರೆ ಎಂದರು. ಇಡೀ ವಿಶ್ವದಲ್ಲಿ ಗಾಂಧಿಜಯಂತಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆದು ಮಾದರಿ ಜೀವನ ನಡೆಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಚೇತಕ ಆರ್.ವಿ.ವೆಂಕಟೇಶ್, ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಮತ್ತಿತರರಿದ್ದರು.

Write A Comment