ಶಿವಮೊಗ್ಗ, ಅ.8: ಪ್ರಸ್ತುತ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಕುಲಪತಿ ಯಾಗಿ ಕೆಲಸ ಮಾಡುತ್ತಿರುವ, ಈ ಹಿಂದೆ ಕುವೆಂಪು ವಿಶ್ವ ವಿದ್ಯಾನಿಲಯದ ಕುಲಸಚಿವೆ (ಆಡಳಿತ ವಿಭಾಗ)ಯಾಗಿದ್ದ ಪ್ರೊ. ಮಲ್ಲಿಕಾ ಘಂಟಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕುವೆಂಪು ವಿವಿಯ ನಾಲ್ವರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿರುವ ಸಂಗತಿ ವರದಿಯಾಗಿದೆ.
ಸ್ವತಃ ಮಲ್ಲಿಕಾ ಘಂಟಿಯವರೆ ಈ ನಾಲ್ವರು ಸಿಬ್ಬಂದಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನ ಜೊತೆ ನೀಡಿರುವ ಸಾಕ್ಷ್ಯಾಧಾರಗಳ ಪರಿಶೀಲನೆ ಕೂಡ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಲ್ಲಿಕಾ ಘಂಟಿ ನೀಡಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣವರ್ ಖಚಿತಪಡಿಸಿದ್ದಾರೆ. ಮಲ್ಲಿಕಾ ಘಂಟಿ ನೀಡಿದ ದೂರಿನ ಆಧಾರದ ಮೇಲೆ ಕುವೆಂಪು ವಿವಿಯ ಕೆಲ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದ್ದಾರೆ.
ಕುವೆಂಪು ವಿವಿಯಲ್ಲಿ ಕುಲ ಸಚಿವೆಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿ ವಿವಿಯಲ್ಲಿ ಕೆಲಸ ಮಾಡುವ ಸುಮಾರು ನಾಲ್ಕೈದು ಜನ ಸಿಬ್ಬಂದಿ ತನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಮಲ್ಲಿಕಾ ಘಂಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮಲ್ಲಿಕಾ ಘಂಟಿ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಕುಲಪತಿಗಳಾಗಿ ನಿಯೋಜನೆಗೊಂಡಿದ್ದರು. ಜೀವ ಬೆದರಿಕೆಗೆ ಸಂಬಂಧಿಸಿದಂತೆ ಅವರು ತಡವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಪೊಲೀಸರು ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಬಿರುಸುಗೊಳಿಸಿದ್ದಾರೆ. ತನಿಖೆಯ ನಂತರವಷ್ಟೆ ಸತ್ಯಾಂಶ ಏನೆಂಬುದು ಹೊರಬರಬೇಕಾಗಿದೆ.