ಗದಗ, ಅ.19: ಖಾಸಗಿ ಸುದ್ದಿವಾಹಿನಿಯ ಮಹಿಳಾ ವರದಿಗಾರ್ತಿಯೊಬ್ಬರ ಪ್ರಶ್ನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಕಾರಣಕ್ಕೂ ಮಹಿಳೆಯರ ಬಗ್ಗೆ ಈ ರೀತಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು. ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಇಂತಹ ವಿಚಾರಗಳನ್ನು ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂದು ಅವರು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲ. ನಾನು ಸದ್ಯಕ್ಕೆ ರಾಜ್ಯ ಪ್ರವಾಸದಲ್ಲಿದ್ದೇನೆ. ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಯಡಿಯೂರಪ್ಪ ತಿಳಿಸಿದರು. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ, ಒಂದು ರೀತಿಯಲ್ಲಿ ‘ತುಘಲಕ್ ದರ್ಬಾರ್’ ನಡೆಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.
