ಕರ್ನಾಟಕ

ಜೆಡಿಎಸ್ ಮಹಿಳಾ ಸಮಾವೇಶ; ಜೆಡಿಎಸ್‌ನಿಂದ ಮಾತ್ರ ಮಹಿಳಾ ಮೀಸಲಾತಿ ಸಾಧ್ಯ: ಕುಮಾರಸ್ವಾಮಿ

Pinterest LinkedIn Tumblr

JDS women BBMP members felicitated by JDS party leaders during the JDS Mahila Samavesha at Gayathri Vihar Palace Ground in Bengaluru on Sunday. - KPN ### JDS Mahila Samavesha

ಬೆಂಗಳೂರು, ನ. 15: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಜಾರಿಗೆ ತರಲು ಜೆಡಿಎಸ್‌ನಿಂದ ಮಾತ್ರ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ಲೋಕಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿ ವಿಧೇಯಕವನ್ನು ಜಾರಿ ಮಾಡಿದ್ದರು. ಆದರೆ, ನಂತರ ಅಧಿಕಾರಕ್ಕೆ ಬಂದ ಎನ್‌ಡಿಎ ಹಾಗೂ ಯುಪಿಎ ಸರಕಾರಗಳು ಮಹಿಳಾ ಮೀಸಲಾತಿ ಜಾರಿಗೆ ತರಲು ಪ್ರಯತ್ನ ಮಾಡಿಲ್ಲವೆಂದು ಆರೋಪಿಸಿದರು.ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತರಲು ಪ್ರಯತ್ನ ಮಾಡಿದ್ದರು. ಅಲ್ಲದೆ, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ನೇತತ್ವದಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಗಾಗಿ ಒತ್ತಾಯಿಸಲು ನಿಯೋಗವನ್ನು ದಿಲ್ಲಿಗೆ ಕಳುಹಿಸಿಕೊಟ್ಟಿದ್ದರು ಎಂದು ಅವರು ತಿಳಿಸಿದರು.

ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹಾಗೆಯೇ ಸಾಮಾಜಿಕ ಕಾರ್ಯಕರ್ತರು ರೈತರ ಆತ್ಮಹತ್ಯೆ ತಡೆಯುವಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ತಿಳಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೆ ತರಬೇಕು ಎಂಬ ಬಗ್ಗೆ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಲಾಗಿದ್ದು, ಇದನ್ನು ಪ್ರಧಾನಿಗೆ ಕಳುಹಿಸಿ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದರು. ಈ ವೇಳೆ ಉಪಮೇಯರ್ ಹೇಮಲತಾ ಗೋಪಾಲಯ್ಯ ಸೇರಿದಂತೆ ಎಲ್ಲಮಹಿಳಾ ಬಿಬಿಎಂಪಿ ಸದಸ್ಯರನ್ನೂ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಝಮೀರ್ ಅಹ್ಮದ್ ಖಾನ್, ಗೋಪಾಲಯ್ಯ, ಅಖಂಡ ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ಶರವಣ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಲೀಲಾದೇವಿ ಆರ್.ಪ್ರಸಾದ್, ರಾಜ್ಯ ಮಹಿಳಾ ಅಧ್ಯಕ್ಷೆ ಲೀಲಾ ನಾಯಕ್, ಮಹಾನಗರ ಅಧ್ಯಕ್ಷೆ ಲತಾ ಸುಕುಮಾರ್ ಮತ್ತಿತರರಿದ್ದರು.

Write A Comment