ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಪಿ.ರಮೇಶ್ ಅವರ ಮನೆಯ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ರಮೇಶ್ ಅವರ ಜೋಗುಪಾಳ್ಯದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು, ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ದಾಳಿ ವೇಳೆ ನಿವಾಸದಲ್ಲಿದ್ದ 3 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದು, ಸಿಎಂ ಪುತ್ರ ರಾಕೇಶ್ ಅವರಿಗೆ ಸೇರಿರುವ ಹಲವು ದಾಖಲೆಗಳು ,ಹಲವು ಗುತ್ತಿಗೆದಾರರ ಮೊಬೈಲ್ ನಂಬರ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ದೆಹಲಿ ಮತ್ತು ಕೋಲ್ಕತಾದಿಂದ ಆಗಮಿಸಿದ್ದ 45 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಇನ್ನೂ ಕೆಲವರ ನಿವಾಸಗಳ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಪಿ.ರಮೇಶ್ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು.