ಬೆಂಗಳೂರು, ಜ.14- ಮುಂದಿನ ತಿಂಗಳು ನಡೆಯಲಿರುವ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಸಂಪೂರ್ಣವಾಗಿ ಬೆಂಬಲ ನೀಡಿ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯನಾಯ್ಡು ಸ್ಪಷ್ಟಪಡಿಸಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಬ್ಬ ರಿಗೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಕಟ್ಟಾಸುಬ್ರಹ್ಮಣ್ಯನಾಯ್ಡು ಪಕ್ಷದ ಮುಖಂಡರಿಗೆ ಒತ್ತಡ ಹಾಕಿದ್ದರೆಂಬ ಮಾತು ಕೇಳಿ ಬಂದ ಸಂದರ್ಭದಲ್ಲೇ ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಪಕ್ಷದ ಮುಖಂಡರು ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಗೂ ಟಿಕೆಟ್ ನೀಡಿದರೂ ನನ್ನ ಅಭ್ಯಂತರವಿಲ್ಲ. ಪಕ್ಷ ಹಾಗೂ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿರುತ್ತೇನೆ. ಕಾರ್ಯಕರ್ತರು ಕೂಡ ಈ ನಿರ್ಧಾರವನ್ನು ಬೆಂಬಲಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಜಗದೀಶ್‌ಕುಮಾರ್ ಅಕಾಲಿಕ ನಿಧನ ನನಗೆ ತುಂಬಾ ನೋವು ತಂದಿದೆ. ನನ್ನ ಸಹೋದರನಂತಿದ್ದ ಅವರ ಸಾವು ನಮ್ಮ ಕುಟುಂಬ ದವರಿಗೆ ಭರಿಸಲಾಗದ ನಷ್ಟವುಂಟು ಮಾಡಿದೆ. ಇಂತಹ ದುಃಖದ ಸಮಯದಲ್ಲಿರುವಾಗ ನಾನು ಚುನಾವಣೆ ಎದುರಿಸುವ ಪರಿಸ್ಥಿತಿ ಇಲ್ಲ ಎಂದು ಕಟ್ಟಾ ಸುಬ್ರಹ್ಮಣ್ಯನಾಯ್ಡು ಸ್ಪಷ್ಟಪಡಿಸಿದ್ದಾರೆ. ಯಾರು ಎಷ್ಟೇ ಒತ್ತಡ ಹಾಕಿದರೂ ಚುನಾವಣೆಗೆ ನಿಲ್ಲುವುದಿಲ್ಲ. ಯಾರನ್ನೇ ಅಭ್ಯರ್ಥಿಯನ್ನು ಮಾಡಿದರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.