ಬೇಲೂರು, ಜ.21-ಹೈದರಬಾದ್‌ನ ಕೇಂದ್ರಿಯ ವಿಶ್ವವಿದ್ಯಾಲಯದ ವಸತಿ ಗೃಹದಲ್ಲಿ ದಲಿತ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ತಕ್ಷಣವೆ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಹಾಸನ ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಹಾಗೂ ಮೈಸೂರು ವಿಭಾಗಿಯ ಸಂಚಾಲಕ ಮಲ್ಲೇಶ್ ಅಂಬುಗ ಒತ್ತಾಯಿಸಿದ್ದಾರೆ.
ಹೈದರಬಾದ್ ವಿಶ್ವವಿದ್ಯಾಲಯ 5 ಜನ ದಲಿತ ಸಂಶೋಧನಾ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರ ಹಾಕಿತ್ತು, ಈ ಅವಮಾನವನ್ನು ಸಹಿಸಲಾಗದೆ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ದಲಿತ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾಲಯದಿಂದ ಹೊರ ಹಾಕಲು ಹಾಗೂ ವಿದ್ಯಾರ್ಥಿ ರೋಹಿತ್ ವೆಮುಲ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖವಾಗಿ ಕೇಂದ್ರ ಸಚಿವ ಬಂಡಾರು ದತ್ತಾತ್ರೆಯ ಹಾಗೂ ವಿಶ್ವವಿದ್ಯಾನಿಲಯದ ಕುಲಪತಿ ನೇರ ಕಾರಣವಾಗಿರುವುದು ವಿದ್ಯಾರ್ಥಿ ಬರೆದಿರುವ ಡೆತ್ ನೋಟ್‌ನಲ್ಲಿ ಕಂಡು ಬಂದಿದೆ.
ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ದಲಿತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿ ಕೊಡಬೇಕು. ಹಾಗೂ ಹೈದರಬಾದ್‌ನ ಕೇಂದ್ರಿಯ ವಿವಿಯಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ದ ನಡೆಯುತ್ತಿರುವ ಪಿತೂರಿ ನಿಲ್ಲಿಸಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ವಾತಾವರಣ ನಿರ್ಮಿಸಬೇಕು, ಇಲ್ಲದಿದ್ದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿ ಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.