ಚಿಕ್ಕಮಗಳೂರು, ಜ. ೨೬- ಭವಿಷ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ರಾಜ್ಯ ಪೊಲೀಸ್ ಇಲಾಖೆಯನ್ನು ಸಜ್ಜುಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಚಿಕ್ಕಮಗಳೂರಿನಲ್ಲಿಂದು ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಪೊಲೀಸ್ ಇಲಾಖೆಯನ್ನು ಆಧುನಿಕ ಶಸ್ತ್ರಾಸ್ತ್ರಗಳಿಂದ ಸಜ್ಜುಗೊಳಿಸಲಾಗುತ್ತದೆ. ಭಯೋತ್ಪಾದಕರು ಬಳಸುವ ಶಸ್ತ್ರಾಸ್ತ್ರಗಳನ್ನು ಮೀರಿಸುವ ಶಸ್ತ್ರಗಳನ್ನು ಪೊಲೀಸರಿಗೆ ಒದಗಿಸಲಾಗುವುದು ಎಂದರು.
ಭಯೋತ್ಪಾದನೆ ತಡೆಗೆ ವಿಶೇಷ ಪಡೆಯನ್ನು ಸಜ್ಜುಗೊಳಿಸಲಾಗುವುದು. ಗರುಡ ಪಡೆಯನ್ನು ಮೀರಿಸುವಂತೆ ಈ ಪಡೆ ಕಾರ್ಯನಿರ್ವಹಿಸಲಿದೆ ಎಂದರು.
ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರಿಗೆ ವಿಶೇಷ ತರಬೇತಿಯನ್ನು ನೀಡಲಾಗುವುದು. ಭವಿಷ್ಯದಲ್ಲಿ ಭಯೋತ್ಪಾದನೆ ತಡೆಗೆ ರಾಜ್ಯ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಲಿದೆ ಎಂದರು.
ಸನ್ನಡತೆಯ ಆಧಾರದ ಮೇಲೆ ರಾಜ್ಯದ ವಿವಿಧ ಕಾರಾಗೃಹಗಳಿಂದ 375 ಕೈದಿಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ ಎಂದವರು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ಸಂತೋಷದಿಂದ ಒಪ್ಪಿದ್ದೇನೆ. ಯಾರದೇ ಒತ್ತಡ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಉತ್ತಮ ಕೆಲಸ ಮಾಡುವುದಾಗಿ ಅವರು ಹೇಳಿದರು.
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ವಿವಾದವನ್ನು ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಪರಿಹರಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು