ಬೆಂಗಳೂರು, ಫೆ.10-ಕಳಸಾ ಬಂಡೂರಿ ಮಹದಾಯಿ ಯೋಜನೆ ಹಾಗೂ ಮೇಕೆದಾಟು ಕುಡಿಯುವ ನೀರು ಯೋಜನೆ ಕಾರ್ಯಗತವಾಗ ಬೇಕು. ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗ ಬೇಕು. ಮುಂದಿನ ಆಯವ್ಯಯದಲ್ಲಿ ವಿಶೇಷ ಯೋಜನೆ ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ಹಾಸಿಗೆ, ದಿಂಬು, ತಟ್ಟೆ, ಚೆಂಬು ಸಹಿತ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಏಕಾಂಗಿ ಹೋರಾಟ ನಡೆಸಿದರು.ಉತ್ತರ ಕರ್ನಾಟಕ ಹಾಗೂ ಹೈದರಾ ಬಾದ್ ಕರ್ನಾಟಕದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಯಲಿಲ್ಲ. ಮುಂಬರುವ ಅಧಿವೇಶನದಲ್ಲಾದರೂ ಈ ಬಗ್ಗೆ ಸಮಗ್ರ ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮೇಕೆದಾಟು ಯೋಜನೆಗೆ ಯಾರ ಅಡ್ಡಿ ಆತಂಕವೂ ಇಲ್ಲ. ಕೂಡಲೇ ಯೋಜನೆಗೆ ಶಂಕುಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು. ಈ ಯೋಜನೆಯಿಂದ ವಿದ್ಯುಚ್ಛಕ್ತಿ ತಯಾರಿಕೆ, ಕುಡಿಯುವ ನೀರಿಗೆ ಅನುಕೂಲವಾಗುತ್ತದೆ. ಉತ್ತರ ಕರ್ನಾಟಕದ ಬಹುತೇಕ ಶಾಸಕರು ಶಾಸನ ಸಭೆಯಲ್ಲಿ ತಮ್ಮ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಲೋಕಸಭಾ ಸದಸ್ಯರು ಕಳಸಾ ಬಂಡೂರಿ ಸಮಸ್ಯೆ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡದಿರುವುದು ದುರದೃಷ್ಟಕರ.
ಆ ಭಾಗದ ಜನ 210ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಆ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೂಡಲೇ ಜನಪ್ರತಿನಿಧಿಗಳು ತಮ್ಮ ರಾಜಕೀಯ ಪ್ರತಿಷ್ಠೆಯನ್ನು ಬದಿಗಿಟ್ಟು ಸಮಸ್ಯೆ ಬಗೆಹರಿಸಲು ಮುಂದಾಗಬೇಕೆಂದು ಕರೆ ನೀಡಿದರು.