ಬೆಂಗಳೂರು, ಫೆ.24-ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಇನ್ನೆರಡು ಮೂರು ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಅತಂತ್ರವಾಗಿರುವ ಜಿಪಂ, ತಾಪಂಗಳಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಪಂ ಮತ್ತು ತಾಪಂ ಅಧಿಕಾರ ಹಿಡಿಯುವಲ್ಲಿ ನಮ್ಮ ಪಕ್ಷ ಹಲವು ಕಡೆ ನಿರ್ಣಾಯಕ ಪಾತ್ರ ವಹಿಸಿಲಿದೆ. ಕೆಲವೆಡೆ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದರೆ, ಮತ್ತೆ ಕೆಲವೆಡೆ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ ಎಂದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು. ಯಾವ ನಿಲುವನ್ನು ಜೆಡಿಎಸ್ ಕೈಗೊಳ್ಳಬೇಕು ಎಂಬ ಸೂಕ್ತ ನಿರ್ಣಯ ಕೈಗೊಂಡು ಸೂಕ್ತ ನಿರ್ದೇಶನ ನೀಡಲಾಗುವುದು. ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಎರಡು ರಾಷ್ಟ್ರೀಯ ಪಕ್ಷಗಳಲ್ಲಾಗುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಸೂಕ್ತ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದರು.