ಕರ್ನಾಟಕ

ಮೀಸಲಾತಿ ಘೋಷಣೆ ಬೇಕೆಂದೇ ವಿಳಂಬ :ಎಚ್.ಡಿ. ರೇವಣ್ಣ

Pinterest LinkedIn Tumblr

revannaಬೆಂಗಳೂರು, ಫೆ.27- ಅತಂತ್ರವಾಗಿರುವ 11 ಜಿಲ್ಲಾ ಪಂಚಾಯ್ತಿಗಳಲ್ಲಿ ಆಪರೇಷನ್ ಹಸ್ತದ ಮೂಲಕ ಅಧಿಕಾರ ಹಿಡಿಯುವ ದುರುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಿಸದೆ ವಿಳಂಬ ಮಾಡುತ್ತಿದೆ ಎಂದು ಜೆಡಿಎಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಆಯೋಗ ಜಿಲ್ಲಾ ಮತ್ತು ತಾಲೂಕು ಚುನಾವಣೆ ನಡೆಸಲಿಲ್ಲ. ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ.

ಅಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ಎರಡು ಸ್ಥಾನದಲ್ಲಿದ್ದ ಕಾಂಗ್ರೆಸ್ 16 ಸ್ಥಾನಗಳನ್ನು ಗೆದ್ದಿದೆ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಶಕ್ತಿ ಏನು ಎಂದು ತೋರಿಸುತ್ತೇವೆ. ಮರಳಿ ಅಧಿಕಾರಕ್ಕೆ ತರಲು ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಹೆಗಲು ಕೊಟ್ಟು ನಾನೂ ದುಡಿಯುತ್ತೇನೆ. ಕುಮಾರಸ್ವಾಮಿಯವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದು ನಮ್ಮ ಉದ್ದೇಶ. ಪ್ಲ್ಯಾನ್ ಮಾಡಲು ನಮಗೂ ಗೊತ್ತಿದೆ. ಜೆಡಿಎಸ್‌ನ್ನು ಮುಗಿಸಿಬಿಡುತ್ತೇವೆ ಎನ್ನುವವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇನೆ ಎಂದು ರೇವಣ್ಣ ಹೇಳಿದರು. ಹಾಸನ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ತಮ್ಮ ಪತ್ನಿ ಭವಾನಿ ರೇವಣ್ಣ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸ್ಪರ್ಧಿಸಿ ಗೆದ್ದಿದ್ದಾರೆ. ಅಧ್ಯಕ್ಷರ ಆಯ್ಕೆ ವಿಷಯದಲ್ಲಿ ನಾನೊಬ್ಬನೇ ನಿರ್ಣಯ ತೆಗೆದುಕೊಳ್ಳುವುದಿಲ್ಲ.

ಜಿಲ್ಲೆಯಲ್ಲಿ 5 ಶಾಸಕರಿದರೆ. 23 ಮಂದಿ ಜಿ.ಪಂ. ಸದಸ್ಯರಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಎಲ್ಲರ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ಕೆಎಂಎಫ್‌ನ ಅವ್ಯವಹಾರದ ಬಗ್ಗೆ ಪತ್ರಿಕೆಯೊಂದರಲ್ಲಿ ವರದಿಯಾಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಈ ವಿಷಯದಲ್ಲಿ ಯಾವುದೇ ತನಿಖೆಗೆ ಸಹಕಾರ ನೀಡಲು ಸಿದ್ಧ ಎಂದು ಹೇಳಿದರು. ಇಂಧನ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲದಿರುವುದರಿಂದ ಶರಾವತಿ ಜಲವಿದ್ಯುತ್ ಉತ್ಪಾದನಾ ಘಟಕ ಸುಟ್ಟು ಹೋಗಿದೆ ಎಂದು ರೇವಣ್ಣ ಗಂಭೀರ ಆರೋಪ ಮಾಡಿದರು.

Write A Comment