ಕರ್ನಾಟಕ

ಸಿದ್ದು ಪದಚ್ಯುತಿಗೆ ಸರ್ಕಸ್ : ನಾಯಕತ್ವ ಬದಲಾವಣೆ ಇಂಗಿತ

Pinterest LinkedIn Tumblr

sidduಬೆಂಗಳೂರು, ಮಾ. ೧೪- ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಗಬೇಕೆಂಬ ಒತ್ತಾಯ ರಾಜ್ಯ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿದ್ದು, ಹೈಕಮಾಂಡ್‌ಗೆ ದೂರು ಸಲ್ಲಿಸಿರುವ ಬೆಳವಣಿಗೆಗಳು ಗುಟ್ಟಾಗಿ ಉಳಿದಿಲ್ಲ.
ಹಿರಿಯ ಕಾಂಗ್ರೆಸ್ ನಾಯಕರಾದ ಎಸ್.ಎಂ. ಕೃಷ್ಣ, ಜಾಫರ್ ಷರೀಫ್, ಎಂ.ವಿ. ರಾಜಶೇಖರನ್, ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವರು ಬಹಿರಂಗವಾಗಿ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದು, ಈ ಎಲ್ಲ ಬೆಳವಣಿಗೆಗಳನ್ನು ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಹೈಕಮಾಂಡ್ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಸದ್ಯಕ್ಕೆ ತಲೆಕೆಡಿಸಿಕೊಂಡಂತಿಲ್ಲ. ಅವರ ಚಿತ್ತ ಐದು ರಾಜ್ಯಗಳ ಚುನಾವಣೆಯಲ್ಲೂ ಗೆಲುವಿನ ಕುರಿತು ಅನುಸರಿಸಬೇಕಾದ ಕಾರ್ಯತಂತ್ರ ರೂಪಿಸುವತ್ತ ಕೇಂದ್ರೀಕೃತವಾಗಿದೆ.
ಈ ಚುನಾವಣೆಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರತಿಷ್ಠೆ ಪ್ರಶ್ನೆಯಾಗಿದ್ದು, ತನ್ನ ಅಸ್ತಿತ್ವವನ್ನು ಭದ್ರಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ 18 ರಂದು ಬಜೆಟ್ ಮಂಡನೆ ಮಾಡಲಿದ್ದು, ಈ ತಿಂಗಳ ಅಂತ್ಯದವರೆಗೆ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈಗ ಅವರು ಅಧಿವೇಶನ ಎದುರಿಸುವ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಅಧಿವೇಶನದ ನಂತರ, ಸಚಿವ ಸಂಪುಟ ವಿಸ್ತರಣೆ ಮಾಡಲು ಸಿದ್ದರಾಮಯ್ಯ ಅವರು ಚಿಂತನೆ ನ‌‌ಡೆಸಿದ್ದು, ಇದಕ್ಕೆ ಅವಕಾಶ ದೊರೆಯಲಿದೆಯೇ, ಇಲ್ಲವೇ ಎಂಬುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆಡೆ ಮಾಡಿದೆ.
ಮೇ ತಿಂಗಳಾಂತ್ಯಕ್ಕೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಉಸಾಬರಿ ಮುಗಿಯಲಿದ್ದು, ಆನಂತರ, ಹೈಕಮಾಂಡ್ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನಗೊಳಿಸುವತ್ತ ಆಸಕ್ತಿ ತೋರುವ ಸಾಧ್ಯತೆಯಿದೆ.
ಅಲ್ಲಿ ತನಕ ಸಿದ್ದರಾಮಯ್ಯ ಅವರ ಕುರ್ಚಿ ಭದ್ರವಾಗಿರಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಮತ್ತೊಂದು ಪ್ರಮುಖ ಅಂಶವೆಂದರೆ, ಇತ್ತೀಚೆಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಜಿಲ್ಲಾ- ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಗೆಲುವು ಬಾರದಿರುವುದು, ಸಿದ್ದರಾಮಯ್ಯ ಅವರ ವಿರುದ್ಧ ಕೂಗಿಗೆ ಮತ್ತಷ್ಟು ಬಲ ಬಂದಂತಾಗಿದೆ.
ಜತೆಗೆ ಮೂಲ ಕಾಂಗ್ರೆಸ್ಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಜೋರುದನಿ, ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಮಾಡಬೇಕೆಂಬ ಒತ್ತಾಯಕ್ಕೆ ಶಕ್ತಿ ತುಂಬಿದಂತಾಗಿದೆ.

Write A Comment