ಕರ್ನಾಟಕ

ಬಿಜೆಪಿ ಕಾರ್ಯಕರ್ತನ ಹತ್ಯೆ ನ್ಯಾಯಾಂಗ ತನಿಖೆಗೆ ಆಗ್ರಹ

Pinterest LinkedIn Tumblr

ashok_0ಬೆಂಗಳೂರು, ಮಾ. ೧೫- ಮೈಸೂರಿನ ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಆಗ್ರಹಿಸಿದೆ.

ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ನೇತೃತ್ವದ ಬಿಜೆಪಿ ಶಾಸಕರ ನಿಯೋಗ ಇಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ರವರನ್ನು ಭೇಟಿ ಮಾಡಿ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುಂತೆ ಆಗ್ರಹಿಸಿ ಮನವಿ ಸಲ್ಲಿಸಿತು.

ಸರ್ಕಾರವೇ ನೇರ ಕಾರಣ

ಗೃಹ ಸಚಿವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಮೈಸೂರಿನ ರಾಜು ಕೊಲೆಗೆ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಈ ಕೊಲೆ ಪ್ರಕರಣ ಒಂದು ಸ್ಯಾಂಪಲ್ ಎಂದವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ, ಆರ್ಎಸ್‌ಎಸ್ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಬರ್ಬರ ಕೊಲೆ ಪ್ರಕರಣಗಳು ನಡೆಯುತ್ತಿವೆ. ದೇಶ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಕೆಎಫ್‌ಡಿ ಸಂಘಟನೆಗಳ ವಿರುದ್ಧ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆದಿದ್ದು, ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದರು.

ಕೇರಳದಲ್ಲಿ ಮುಖ್ಯಮಂತ್ರಿ ಚಾಂಡಿ ಸರ್ಕಾರ ಕೆಎಫ್‌ಡಿ ಹಾಗೂ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಿಸಲು ತೀರ್ಮಾನ ಕೈಗೊಂಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಸಂಘಟನೆಗಳ ನಿಷೇಧಕ್ಕೆ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.

ಮೈಸೂರಿನ ರಾಜು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಹಾಗೂ ಕೊಲೆಯಾದ ರಾಜು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದೇವೆ ಎಂದವರು ಹೇಳಿದರು.

ಮೈಸೂರಿನ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಈ ಘಟನೆಯಿಂದ ಮೈಸೂರು ತಲ್ಲಣಗೊಂಡಿದೆ. ಪ್ರಕ್ಷುಬ್ಧ ಪರಿಸ್ಥಿತಿ ಇದೆ. ಇಷ್ಟಾದರೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರೋಪಿಗಳನ್ನು ಬಂಧಿಸದೇ ಕಾಲಾಹರಣ ಮಾಡುತ್ತಿದೆ ಎಂದು ಹರಿಹಾಯ್ದರು.

ಸರ್ಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸದಿದ್ದರೆ ಬಿಜೆಪಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಸುರೇಶ್ ಕುಮಾರ್, ಮುನಿರಾಜು, ಎಂ. ಕೃಷ್ಣಪ್ಪ, ವೈ.ಎ. ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ ಇದ್ದರು.

Write A Comment