ಬೆಂಗಳೂರು, ಮಾ. ೨೨- ಲೋಕಾಯುಕ್ತವನ್ನು ದುರ್ಬಲಗೊಳಿಸುವ ಹುನ್ನಾರದೊಂದಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿರುವುದನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.
ಆಡಳಿತದಲ್ಲಿ ಸ್ವಚ್ಛತೆ ಹಾಗೂ ಪಾರದರ್ಶಕತೆ ಮೂಡುವಂತಾಗಲು ಸರ್ಕಾರ ಎಸಿಬಿ ರಚಿಸಿ ಹೊರಡಿಸಿರುವರ ಅಧಿಸೂಚನೆಯನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ.
ಮೊದಲಿಗೆ ರಾಜ್ಯದಲ್ಲಿ ಅಸ್ವಿತ್ವದಲ್ಲಿದ್ದ ಜಾಗೃತ ಆಯೋಗದ ಕಾರ್ಯನಿರ್ವಹಣೆ ಈ ಆಯೋಗ ಜನರ ಆಶೋತ್ತರಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ 1984 ರಲ್ಲಿ ಲೋಕಾಯುಕ್ತ ರಚನೆಯಾದ ಬಗೆಯನ್ನು ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವರಿಷ್ಠರಿಗೆ ಬರೆದಿರುವ ಮೂರು ಪುಟಗಳ ಪತ್ರದಲ್ಲಿ ವಿವರಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ದೇಶಕ್ಕೆ ಮಾದರಿಯಾಗಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಅಧಿಕಾರ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಎಸಿಬಿ ರಚಿಸುವ ಮೂಲಕ ಲೋಕಾಯುಕ್ತ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದ್ದಾರೆ. ಜನರ ವಿಶ್ವಾಸಾರ್ಹತೆಯನ್ನು ಪಡೆದಿದ್ದ ಲೋಕಾಯುಕ್ತ ಸಂಸ್ಥೆಯನ್ನು ನಾಶ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ತಡೆದು ಅಧಿಸೂಚನೆಯನ್ನು ರದ್ದುಪಡಿಸಲು ಮುಖ್ಯಮಂತ್ರಿಗೆ ಸೂಚನೆ ನೀಡಬೇಕೆಂದು ಆಗ್ರಹಪಡಿಸಿದ್ದಾರೆ.