ಕರ್ನಾಟಕ

ಮೈಸೂರಿನಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರತ್ಯೇಕ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ..

Pinterest LinkedIn Tumblr

mysoreಮೈಸೂರು, ಏ.4-ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ನಗರದಲ್ಲಿಂದು ಪ್ರತಿಭಟನೆಗಳ ಮಹಾಪೂರವೇ ಹರಿಯಿತು. ಕಾಂಗ್ರೆಸ್ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿತು. ಇನ್ನು ಜೆಡಿಎಸ್ ಎಸಿಬಿ ರಚನೆ ವಿರೋಧಿಸಿ ಪ್ರತಿಭಟನೆಗೆ ಮುಂದಾಯಿತು. ಒಟ್ಟಾರೆ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮೂರೂ ಪಕ್ಷಗಳ ಪ್ರತಿಭಟನೆ ನಡೆಯಿತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಹಾಗೂ ಅನೈತಿಕವಾಗಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸರ್ವಾಧಿಕಾರಿ ಧೋರಣೆ ತಾಳುತ್ತಿರುವುದನ್ನು ಖಂಡಿಸಿ ನಗರ ಕಾಂಗ್ರೆಸ್ ಅಧ್ಯಕ್ಷ ರವಿಶಂಕರ್, ಶಾಸಕರಾದ ತನ್ವೀರ್‌ಸೇಠ್, ಎಂ.ಕೆ.ಸೋಮಶೇಖರ್, ವಾಸು ಹಾಗೂ ಎಚ್.ವಿಶ್ವನಾಥ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ರಾಜು ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಸಂಸದ ಪ್ರತಾಪ್‌ಸಿಂಹ, ಈಶ್ವರಪ್ಪ, ಅಶೋಕ್, ಸಿ.ಟಿ.ರವಿ, ನಗರ ಅಧ್ಯಕ್ಷ ಮಾರುತಿರಾವ್ ಪವಾರ್ ಹಾಗೂ ರಾಜು ಕುಟುಂಬಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೊಲೆ ನಡೆದ ಬಳಿಕ ಸರ್ಕಾರ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿತ್ತು. ಆದರೆ ನಂತರದ ದಿನಗಳಲ್ಲಿ ಆರೋಪಿಗಳ ಮಾಹಿತಿ ಸಿಕ್ಕಿಲ್ಲ ಎಂದು ಹೇಳುತ್ತಿದೆ. ರಾಜು ಕೊಲೆ ನಂತರ ಮೈಸೂರಿನಲ್ಲಿ ಅಸ್ಲಾಂ ಎಂಬುವ ವ್ಯಕ್ತಿಯ ಕೊಲೆಯಾಗಿತ್ತು. ಆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ರಾಜು ಹತ್ಯೆ ಆರೋಪಿಗಳ ಮಾಹಿತಿ ಮಾತ್ರ ಇಲ್ಲವೆಂದು ಹೇಳುತ್ತಿರುವುದು ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿದಂತಾಗಿದೆ. ಆರೋಪಿಗಳನ್ನು ರಕ್ಷಿಸುವ ಹುನ್ನಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಲಾಯಿತು. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಜೆಡಿಎಸ್ ಕಾರ್ಯಕರ್ತರು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿರುವುದು ಸರಿಯಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಎಸಿಬಿ ರಚನೆ ಮಾಡುವ ಮೂಲಕ ಲೋಕಾಯುಕ್ತವನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ ಎಂದು ದೂರಿದರು. ನಗರ ಅಧ್ಯಕ್ಷ ರಾಜು ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Write A Comment