ಬೆಂಗಳೂರು, ಏ.12-ಪರಮೇಶ್ವರ್ ಅವರು ಗೃಹ ಸಚಿವರಾಗಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾರನ್ನಾದರೂ ನೇಮಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್ ಐದು ವರ್ಷ ಯಶಸ್ವಿಯಾಗಿ ಪಕ್ಷ ಸಂಘಟನೆ ಮಾಡಿದ್ದಾರೆ.
ಈಗ ಅವರಿಗೆ ಗೃಹ ಸಚಿವ ಸ್ಥಾನ ಸಿಕ್ಕಿದೆ. ಪಕ್ಷ ಸಂಘಟನೆಗಾಗಿ ಕೆಪಿಸಿಸಿಗೆ ಬೇರೊಬ್ಬರನ್ನು ಅಧ್ಯಕ್ಷರನಗಿ ನೇಮಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಗಮನಹರಿಸುತ್ತಿದೆ. ಇನ್ನೆರಡು ವರ್ಷಗಳಲ್ಲಿ ಚುನಾವಣೆ ಎದುರಾಗುವುದರಿಂದ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು, ಶಿಸ್ತು ಹಾಗೂ ಬದ್ಧತೆಯಿಂದ ಕೆಲಸ ಮಾಡುವವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು ಎಂದು ಅವರು ಹೇಳಿದರು.
ನೀವು ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವುದೇ ಜವಾಬ್ದಾರಿ ಕೊಟ್ಟರೂ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ.ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಕೆಲಸ ಮಾಡಲು ಸದಾ ಸಿದ್ಧ ಎಂದು ಹೇಳಿದರು.