ಬೆಂಗಳೂರು, ಏ.26- ಕಳೆದ ಮೂರು ವರ್ಷಗಳಲ್ಲಿ 612 ತಜ್ಞ ವೈದ್ಯರ ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 314 ಖಾಯಂ, 358 ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 73 ದಂತ ವೈದ್ಯರನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲಾಗಿದೆ. ಜತೆಗೆ 243 ಎಂಬಿಬಿಎಸ್ ವೈದ್ಯರನ್ನು ಖಾಯಂ ಆಗಿ ಹಾಗೂ 474 ಎಂಬಿಬಿಎಸ್ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಮೊದಲ ಹಂತದಲ್ಲಿ ತಜ್ಞ ಹಾಗೂ ವೈದ್ಯರ ನೇಮಕ ಪ್ರಕ್ರಿಯೆ ಮುಗಿದಿದ್ದು, ಖಾಲಿ ಉಳಿದಿರುವ ಹುದ್ದೆಗೆ ಎರಡನೆ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು. ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕೊರತೆಯಿರುವ ಮಕ್ಕಳ ತಜ್ಞರು, ಪ್ರಸೂತಿ ತಜ್ಞರು ಹಾಗೂ ಅರವಳಿಕೆ ತಜ್ಞರನ್ನು ಗುತ್ತಿಗೆ ಹಾಗೂ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಮೂರು ಲಕ್ಷ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, 50 ಸಾವಿರ ಮಾದರಿಗಳಲ್ಲಿ ಸಮಸ್ಯೆಯಿರುವುದು ಕಂಡುಬಂದಿದೆ. ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ ಮತ್ತಿತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಶುದ್ಧ ಕುಡಿಯುವ ನೀರು ಒದಗಿಸಲು ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದರು. ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಹಣ್ಣುಗಳ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಜತೆಗೆ ನೀರಿನ ಕೊರತೆ ಉಂಟಾಗಿರುವ ಪ್ರದೇಶಗಳಿಗೆ ಮತ್ತು ಆಸ್ಪತ್ರೆಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.
ದೊಡ್ಡ ದೊಡ್ಡ ಜಾತ್ರೆಗಳಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ಕ್ಲಿನಿಕ್ ಸ್ಥಾಪನೆ, ಆಂಬುಲೆನ್ಸ್ ಮತ್ತು ಬಳಸುವ ನೀರನ್ನು ಪರೀಕ್ಷೆಗೊಳಪಡಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಕಟ್ಟಡ ಕಾರ್ಮಿಕರು ಮತ್ತು ಮಕ್ಕಳಿಗೆ ಬಿಸಿಲಿನಿಂದ ಉಂಟಾಗುವ ಸಮಸ್ಯೆ ತಪ್ಪಿಸಲು ಬಿಬಿಎಂಪಿ ಜತೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು. ಮಧ್ಯಾಹ್ನದ ಬಿಸಿಲಿನಿಂದ ದೂರವಿರುವುದು, ಹತ್ತಿ ಬಟ್ಟೆ ಬಳಕೆ, ಹೆಚ್ಚಾಗಿ ನೀರು ಕುಡಿಯುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.