
ಬೆಂಗಳೂರು,ಮೇ.೩೧-ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಾಡಿದ್ದು (ಜೂ.೨ರಂದು) ರಾಜ್ಯಾದ್ಯಂತ ಸರ್ಕಾರಿ ನೌಕರರು ಒಂದು ದಿನದ ಮುಷ್ಕರ ನಡೆಸಲು ಉದ್ದೇಶಿಸಿರುವ ಬೆನ್ನಲ್ಲೇ ಜೂ.೪ ರಂದು ಪೊಲೀಸರು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕರ್ತವ್ಯಕ್ಕೆ ರಜೆ ಹಾಕುವ ಮೂಲಕ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿರುವುದು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.
ಸರ್ಕಾರಿ ನೌಕರರ ಮುಷ್ಕರ ಮತ್ತು ಪೊಲೀಸರ ಪ್ರತಿಭಟನೆಯ ವಿಷಯ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು,ಕಾನೂನು ಸುವ್ಯಸ್ಥೆ ಕಾಪಾಡುವ ಪೊಲೀಸರೇ ಒಂದು ವೇಳೆ ಪ್ರತಿಭಟನೆ ನಡೆಸುವ ಹಠಕ್ಕೆ ಜೋತುಬಿದ್ದರೆ ಆದರಿಂದಾಗುವ ಮುಜುಗರದ ಸನ್ನಿವೇಶದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ಕರೆದಿದ್ದು ಅಲ್ಲಿ ಪೊಲೀಸರ ವಿವಿದ ಬೇಡಿಕೆಗಳ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್.ಎಸ್ ಮೇಘರಿಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು ಪೊಲೀಸರ ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ.ಅಲ್ಲಿ ಪೊಲೀಸರ ಸಮಸ್ಯಗಳಿಗೆ ಪರಿಹಾರ ಸಿಗುವ ಎಲ್ಲಾ ಸಾಧ್ಯತೆಗಳಿವೆ.
ಹಿರಿಯ ಅಧಿಕಾರಿಗಳ ಕಿರುಕುಳ, ರಜೆ ನೀಡದಿರುವುದು,ಮೂಲ ಸೌಕರ್ಯ ಇಲ್ಲದಿರುವುದು ಸೇರಿದಂತೆ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಪೊಲೀಸರು ಪ್ರತಿಭಟನೆ ನಡೆಸಲು ಉದ್ದೇಶಿಸುತ್ತಿದ್ದಂತೆ ಸರ್ಕಾರ, ರಾಜ್ಯದ ಪ್ರತಿಯೊಂದು ಜಿಲ್ಲೆಗೂ ಇಬ್ಬರು ಮೂರು ಮಂದಿಯಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಸಿಬ್ಬಂಧಿಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪ್ರತಿಭಟನೆ ಕೈ ಬಿಡುವಂತೆ ಮನವೊಲಿಸುವ ಕೆಲಸವನ್ನೂ ಮಾಡಿದ್ದಾರೆ.
ಸಿಬ್ಬಂದಿಗಳ ಜೊತೆ ನಡೆಸಿದ ಮಾತುಕತೆ ಮತ್ತು ಅವರ ಬೇಡಿಕೆಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ. ಸಮಸ್ಯೆ ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಪೊಲೀಸರು ಪ್ರತಿಭಟನೆ ಕೈ ಬಿಡಿ ಎಂದು ಮನವಿ ಮಾಡಿದ್ದಾರೆ ಅಲ್ಲದೆ ಪೊಲೀಸರನ್ನು ಪ್ರತಿಭಟನೆಗೆ ಪ್ರಚೋದಿಸುವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಪೊಲೀಸರ ಪ್ರತಿಭಟನೆಗೆ ಸಾರ್ವಜನಿಕವಾಗಿಯೂ ಬೆಂಬಲ ವ್ಯಕ್ತವಾಗಿದೆ ಅಲ್ಲದೆ ಕಾಂಗ್ರೆಸ್‌ನ ಶಾಸಕರು ಮತ್ತು ಸಾಂಸದರಿಂದಲೂ ಬೆಂಬಲ ವ್ಯಕ್ತವಾಗಿದೆ ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟಿಗೆ ಸಿಲುಕುವಂತಾಗಿದ್ದು ಎರಡೂ ಮುಷ್ಕರವನ್ನು ಗಂಬೀರವಾಗಿ ಪರಿಗಣಿಸಿದೆ.
ಈ ಮಧ್ಯೆ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ೧೨ ಮಂದಿ ಪೊಲೀಸರು ರಜೆ ಹಾಕಿದ್ದು ಉಳಿದ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ರಜೆ ಹಾಕಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ವಿವಿಧ ಜಿಲ್ಲೆಗಳು ಮತ್ತು ತಾಲ್ಲೂಕುಗಳಿಗೆ ನಿಯೋಜಿಸಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆಸುವ ಮಹತ್ವದ ಸಭೆಯ ಬಳಿಕ ಪೊಲೀಸರ ಮುಂದಿನ ಹೆಜ್ಜೆ ನಿರ್ಧಾರವಾಗುವ ಎಲ್ಲಾ ಸಾಧ್ಯತೆಗಳಿವೆ.
Comments are closed.