ಬೆಂಗಳೂರು, ಜು. ೪- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 1034 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಸಮ್ಮತಿಸಿದ್ದು, ಈಗಾಗಲೇ 605 ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
52 ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ 78 ಅಧೀಕ್ಷಕರು, ದರ್ಜೆ 1 ವೃಂದ ಹುದ್ದೆಗಳ ಭರ್ತಿಗೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಕೂಡಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
33 ಬೆರಳಚ್ಚುಗಾರರು, 67 ವಾಹನ ಚಾಲಕರು ಹಾಗೂ 199 ಗ್ರೂಪ್ ಡಿ ನೌಕರರ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಎಂ.ಕೆ. ಪ್ರಾಣೇಶ್ ಪ್ರಶ್ನೆಗೆ ಉತ್ತರಿಸಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ತರಿಕೆರೆಯಲ್ಲಿ ಚಂದ್ರಪ್ಪ ಎಂಬುವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಈಗಲೂ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ ಹುದ್ದೆಗಳಲ್ಲಿ ಲಭ್ಯವಿರುವ ಅಧಿಕಾರಿಗಳನ್ನು ಪ್ರಭಾರದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.
Comments are closed.