ಕರ್ನಾಟಕ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜೀನಾಮೆಗೆ ಒತ್ತಾಯ…ಸಿಬಿಐ ತನಿಖೆಗೆ ಆಗ್ರಹ

Pinterest LinkedIn Tumblr

pro

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಜನಾಕ್ರೋಶ ತೀವ್ರಗೊಂಡಿದೆ. ಜಾರ್ಜ್ ಅವರ ರಾಜೀ ನಾಮೆಗೆ ಒತ್ತಾಯ ಹೆಚ್ಚಾಗಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹ ತೀವ್ರಗೊಂಡಿದೆ. ಬೆಂಗಳೂರು, ಮೈಸೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕಮಗಳೂರು, ವಿಜಯಪುರ, ಚಾಮರಾಜನಗರ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಪ್ರತಿಭಟನೆ ನಡೆದಿದೆ. ಬಿಜೆಪಿ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಆತ್ಮಹತ್ಯೆಗೆ ಕಾರಣರಾದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಚಿವ ಜಾರ್ಜ್ ಅವರ ತಲೆದಂಡವಾಗಬೇಕು ಎಂದು ಆಗ್ರಹಿಸಿದ್ದಾರೆ.

ಮೇಲಾಧಿಕಾರಿಗಳ ಕಿರುಕುಳ ಈ ಹಿಂದೆ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ದೌರ್ಜನ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಎಂ.ಕೆ.ಗಣಪತಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಕೂಡ ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆದವು. ಸಾರ್ವಜನಿಕರು ಸಂಘಟನೆ ಕಾರ್ಯಕರ್ತರು ರಸ್ತೆತಡೆ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರತಾಪ್ಸಿಂಹ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದೆ. ಈ ಸರ್ಕಾರ ತೊಲಗುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಸಜ್ಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಲಾಯಿತು. ಮೈಸೂರಿನಲ್ಲಿ ಎಂ.ಕೆ.ಗಣಪತಿ ಆತ್ಮಹತ್ಯೆ ಖಂಡಿಸಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿದ್ದು ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿದರು.

ಆತ್ಮಹತ್ಯೆ ಮಾಡಿಕೊಂಡ ಗಣಪತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಮಹಾನಗರ ಪಾಲಿಕೆ ಸದಸ್ಯ ನಾಗೇಶ್, ಶಿವಾನಂದ ಮತ್ತಣ್ಣನವರ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬೀದರ್ನಲ್ಲಿ ಗಣಪತಿ ಆತ್ಮಹತ್ಯೆ ಖಂಡಿಸಿ ನಗರದ ಗಣೇಶ ಮಂದಿರ ಮೈದಾನದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ್ಯಾ ಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಚಿವ ಜಾರ್ಜ್ ರಾಜೀನಾಮಗೆ ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಶೈಲೇಂದ್ರ ಬೆಲ್ದಾಳೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲಾಯಿತು. ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ನಾಯಕ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಾರ್ಜ್ ಅವರ ಪ್ರತಿಕೃತಿ ದಹಿಸಿದರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

Comments are closed.