ಹುಬ್ಬಳ್ಳಿ: ‘ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಯಾವುದೇ ಒತ್ತಡ ಇಲ್ಲ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ. ಅವರು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಸರ್ಕಾರ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯೊಳಗೆ ಸಣ್ಣಪುಟ್ಟ ಲೋಪಗಳಾಗಿರಬಹುದು. ಕಾನೂನು ಬಾಹಿರ ಕೆಲಸಗಳಾಗಿರಬಹುದು. ಅವುಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದರು.
ಸಿದ್ದರಾಮಯ್ಯರಿಂದ ತೊಘಲಕ್ ಆಡಳಿತ: ಶೆಟ್ಟರ್
‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತೊಘಲಕ್ ಆಡಳಿತ ನಡೆಯುತ್ತಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಕಾರಣರಾದ ಸಚಿವ ಕೆ.ಜೆ. ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಲೋಕಾಯುಕ್ತ ಐಜಿ ಪ್ರಣವ್ ಮೊಹಾಂತಿ, ಗುಪ್ತದಳದ ಎಡಿಜಿಪಿ ಎ.ಎಂ. ಪ್ರಸಾದ್ ಅವರನ್ನು ಕೆಲಸದಿಂದ ವಜಾ ಮಾಡಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.
Comments are closed.