
ಮಂಡ್ಯ: ತಮಿಳುನಾಡಿಗೆ ಒಟ್ಟು 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸುವಂತೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಾಧೀಶರ ವಿರುದ್ಧ ಸ್ಥಳೀಯ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.
ಮಂಡ್ಯದ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಿಆರ್ ಪಿಸಿ ಸೆಕ್ಷನ್ 200 ಅಡಿಯಲ್ಲಿ ದಾಖಲಿಸಲಾಗಿರುವ ಖಾಸಗಿ ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಜಯಲಲಿತಾ, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಹೆಸರನ್ನು ಸೇರಿಸಲಾಗಿದೆ. ಮಂಡ್ಯದ ಎಂಡಿ ರಾಜಣ್ಣ ಎಂಬುವವರು ದೂರು ದಾಖಲಿಸಿದ್ದು, ರಾಜ್ಯಗಳ ನಡುವಿನ ಜಲ ವಿವಾದದ ವಿಷಯದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗೆ ಅಧಿಕಾರವಿಲ್ಲ, ಈ ಹಿನ್ನೆಲೆಯಲ್ಲಿ ಜಲವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲು ಸಾಧ್ಯವಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಸೆ.14 ಕ್ಕೆ ಮುಂದೂಡಿದೆ. ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್ಸ್ ನಷ್ಟು ನೀರನ್ನು 10 ದಿನಗಳ ವರೆಗೆ ಹರಿಸುವ ಮೂಲಕ ಒಟ್ಟು 1.50 ಲಕ್ಷ ಕ್ಯೂಸೆಕ್ಸ್ ನೀರನ್ನು ನೀಡಬೇಕೆಂದು ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರಾ, ನ್ಯಾ.ಯುಯು ಲಲಿತ್ ಅವರಿದ್ದ ವಿಭಾಗೀಯ ಪೀಠ ಸೆ.5 ರಂದು ಕರ್ನಾಟಕಕ್ಕೆ ಆದೇಶ ನೀಡಿತ್ತು. ಸುಪ್ರೀಂ ಕೋರ್ಟ್ ನ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಿತ್ತು, ಸುಪ್ರೀಂ ಕೋರ್ಟ್ ನ ಆದೇಶ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಸೆ.9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು.
ಕರ್ನಾಟಕ
Comments are closed.