ಕರ್ನಾಟಕ

ವಿಧಾನಸೌಧಕ್ಕೆ ಮುತ್ತಿಗೆ ಹಾಕಲೆತ್ನಿಸಿದ ವಾಟಾಳ್-ಕನ್ನಡಪರ ಸಂಘಟನೆಗಳ ಮುಖಂಡರ ಅರೆಸ್ಟ್

Pinterest LinkedIn Tumblr

vatal

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅವೈಜ್ಞಾನಿಕವಾಗಿದೆ ಎಂದು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಡಾ.ರಾಜ್‍ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಇನ್ನಿತರ ಕನ್ನಡಪರ ಸಂಘಟನೆಗಳ ಮುಖಂಡರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ತೀರ್ಪು ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂಕೋರ್ಟ್ ತೀರ್ಪಿನಿಂದ ಕನ್ನಡಿಗರಿಗೆ ತೀವ್ರ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಕೂಡಲೇ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಸೆ.15ಕ್ಕೆ ರೈಲು ಬಂದ್ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಇದು ಸರ್ಕಾರ ಪ್ರೇರಿತ ಕೃತ್ಯವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ತಲೆ ಕೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕಾಗಿದೆ ಎಂದು ವಾಟಾಳ್ ಗುಡುಗಿದರು. ಕರವೇ ಪ್ರವೀಣ್‍ಶೆಟ್ಟಿ ಮಾತನಾಡಿ, ತಮಿಳುನಾಡಿನಲ್ಲಿರುವ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೂಡಲೇ ನಿಲ್ಲಿಸದಿದ್ದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ತೀರ್ಪು ಕನ್ನಡಿಗರಿಗೆ ವಿರುದ್ಧವಾಗಿದ್ದು, ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು. ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ, ಯುವ ಘಟಕ ಅಧ್ಯಕ್ಷ ಜಗದೀಶ್ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.