ಕರ್ನಾಟಕ

ಬಿಕ್ಕಟ್ಟಿಗೆ ಪ್ರಧಾನಿಯೇ ಮದ್ದು : ಕಾವೇರಿ ವಿವಾದ ಸಿಎಂಗೆ ಕಾನೂನು ತಜ್ಞರ ಬುದ್ಧಿವಾದ

Pinterest LinkedIn Tumblr

%e0%b2%9a%e0%b2%ae%e0%b2%aeಬೆಂಗಳೂರು, ಸೆ. ೧೫- ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಹೋರಾಟದಲ್ಲಿ ಅನುಸರಿಸಬೇಕಾದ ರೂಪುರೇಷೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಕಾನೂನು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಕಾನೂನಾತ್ಮಕ ಹೋರಾಟ ಮುಂದುವರೆಸುವ ಬಗ್ಗೆ ಕಾನೂನು ತಜ್ಞರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಹಾಗೂ ಕರ್ನಾಟಕ – ತಮಿಳುನಾಡಿನಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗಾಣಿಸಲು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಕಾನೂನು ತಜ್ಞರು, ನಿವೃತ್ತ ನ್ಯಾಯಾಧೀಶರು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ವಿಳಂಬವಾದರೆ, ಪರಿಸ್ಥಿತಿ ಮತ್ತಷ್ಟು ಹದಗೆಡುವ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿ, ಅಗತ್ಯವೆನಿಸಿದರೆ ರಾಜ್ಯದ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಸಲಹೆಯೂ ಸಭೆಯಲ್ಲಿ ಕೇಳಿ ಬಂದಿದೆ.
ನದಿ ನೀರು ಹಂಚಿಕೆಯಲ್ಲಿ ಎರಡೂ ರಾಜ್ಯಗಳ ಮಧ್ಯೆ ಉಂಟಾಗಿರುವ ಬಿಕ್ಕಟ್ಟು ನಿವಾರಿಸಲು ಪ್ರಧಾನಿ ಮಧ್ಯಪ್ರವೇಶಕ್ಕೆ ಕಾನೂನಿನಲ್ಲೂ ಅವಕಾಶವಿದೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಯಿತು.
ಸೆ. 19 ರಂದು ನಡೆಯಲಿರುವ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ಮತ್ತು ಸೆ. 20 ರ ಕಾವೇರಿ ವಿಚಾರಣೆ ಸಂಬಂಧ ಸುಪ್ರೀಂಕೋರ್ಟ್ ಮುಂದೆ ಮಂಡಿಸಬೇಕಾದ ಕಾನೂನಾತ್ಮಕ ಅಂಶಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ರಾಜ್ಯದ ಜಲಾಶಯಗಳಲ್ಲಿನ ವಸ್ತುಸ್ಥಿತಿ ಅರಿಯಲು ಪರಿಣಿತರ ತಂಡವೊಂದನ್ನು ಕಳುಹಿಸಿಕೊಡಬೇಕು ಎಂಬ ಒತ್ತಾಯವನ್ನು ಮಂಡಿಸುವ ವಿಚಾರದ ಬಗ್ಗೆಯೂ ಚರ್ಚಿಸಲಾಯಿತು.
ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀರ ಕುಸಿದಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ರೂಪುರೇಷೆಗಳು ಹೇಗಿರಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ಇದರಿಂದಾಗಿ ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸಲು ಕಷ್ಟವಾಗುತ್ತದೆ. ಜತೆಗೆ ಕಾವೇರಿ ನೀರನ್ನೇ ನಂಬಿಕೊಂಡಿರುವ ರೈತರ ಬೆಳೆಗಳಿಗೆ ನೀರುಣಿಸುವ ಅನಿವಾರ್ಯತೆಯೂ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಷ್ಟಸಾಧ್ಯ ಎಂಬ ಅಂಶಗಳು ಸಭೆಯಲ್ಲಿ ಪ್ರಸ್ತಾಪಕ್ಕೆ ಬಂದವು.
ಸುಪ್ರೀಂಕೋರ್ಟ್ ಆದೇಶ ಪಾಲನೆ ಕಷ್ಟವಾಗಿದ್ದರೂ ಒಕ್ಕೂಟ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಆದೇಶಕ್ಕೆ ತಲೆಬಾಗಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್ ಮತ್ತು ಕಾವೇರಿ ಉಸ್ತುವಾರಿ ಸಮಿತಿ ಸಭೆಗಳಲ್ಲಿ ಸಮರ್ಥವಾಗಿ ವಾದ ಮಂಡಿಸಲು ಪೂರಕವಾದ ಅಂಶಗಳ ಕುರಿತು ಸಭೆಯಲ್ಲಿ ಸಲಹೆ ಸೂಚನೆ ಪಡೆಯಲಾಯಿತು.
ಕಾನೂನು ಸಚಿವ ಟಿ.ಬಿ.ಜಯಚಂದ್ರ, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‌ಸಿಂಗ್, ನಿವೃತ್ತ ನ್ಯಾಯಮೂರ್ತಿಗಳಾದ ರಾಮಾಜೋಯಿಸ್, ಎ.ಜೆ. ಸದಾಶಿವ, ರಾಜೇಂದ್ರಕುಮಾರ್, ಎನ್. ಕುಮಾರ್, ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್, ಹೆಚ್ಚುವರಿ ಅಡ್ವೋಕೆಟ್ ಜನರಲ್ ಪೊನ್ನಣ್ಣ, ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮೋಹನ್ ಕಾತರಕಿ, ಮಾಜಿ ಅಡ್ವೋಕೆಟ್ ಜನರಲ್‌ಗಳಾದ ಪ್ರೊ. ರವಿವರ್ಮಕುಮಾರ್, ಬಿ.ವಿ. ಆಚಾರ್ಯ, ಅಶೋಕ್ ಹಾರನಹಳ್ಳಿ, ವಿಧಾನಪರಿಷತ್ ಸದಸ್ಯರಾದ ವಿ.ಎಸ್. ಉಗ್ರಪ್ಪ, ಗೋವಿಂದರಾಜು ಮುಂತಾದವರು ಉಪಸ್ಥಿತರಿದ್ದರು.

Comments are closed.