ಕರ್ನಾಟಕ

ಕೂಲಿಗಳಿಗೆ ಚೀನಾ ಯಾತ್ರೆ ಭಾಗ್ಯ

Pinterest LinkedIn Tumblr

h-anjaneyaCLR-418x400

ಬೆಂಗಳೂರು, ಅ. ೪- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬುಡಕಟ್ಟು ಉಪಯೋಜನೆಯಡಿ 2 ಸಾವಿರದ 500 ಮಂದಿ ಪರಿಶಿಷ್ಟ ಜಾತಿ, ಪಂಗಡದ ಕೃಷಿ ಕೂಲಿ ಕಾರ್ಮಿಕರನ್ನು ಮುಂದಿನ ಮಾರ್ಚ್ ತಿಂಗಳೊಳಗೆ ಅಧ್ಯಯನ ಪ್ರವಾಸಕ್ಕಾಗಿ ಚೀನಾಕ್ಕೆ ಕಳುಹಿಸಿ ಕೊ‌ಡಲಾಗುವುದು. ಇದಕ್ಕೆ 25 ಕೋಟಿ ರೂ.ವೆಚ್ಚವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಚೀನಾದಲ್ಲಿ ಆಧುನಿಕ ಕೃಷಿ ಬೆಳೆ ಬೆಳೆಯಲಾಗುತ್ತಿದ್ದು, ಇದರಿಂದ ಚೀನಾ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಅದೇ ಮಾದರಿಯನ್ನು ನಮ್ಮ ರೈತರಿಗೂ ತಿಳಿಸಿಕೊ‌ಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಧ್ಯಯನ ಮುಗಿಸಿ ಬಂದ ಕೃಷಿ ಕೂಲಿ ಕಾರ್ಮಿಕರಿಗೆ ಭೂಮಿ ನೀಡಿ ಅವರನ್ನು ಭೂಮಾಲೀಕರನ್ನಾಗಿ ಮಾಡುವ ಉದ್ದೇಶ ಸರ್ಕಾರಕ್ಕೆ ಇದೆ ಎಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.
ಚೀನಾಕ್ಕೆ ಹೋಗುವ ಕೃಷಿ ಕಾರ್ಮಿಕರ ಪಾಸ್‌ಪೋರ್ಟ್, ವೀಸಾ ಎಲ್ಲವನ್ನೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದಲೇ ಮಾಡಿಕೊಡಲಾಗುವುದು. ಹೋಗುವವರ ಪಟ್ಟಿಯನ್ನು ಕೃಷಿ ಇಲಾಖೆ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಸಿದ್ಧಪಡಿಸಲಿದೆ. ಒಂದು ವಾರಗಳ ಕಾಲ ಕೃಷಿ ಕಾರ್ಮಿಕರು ಅಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದ್ದಾರೆ.
100 ಮಂದಿಯ ತಂಡಗಳಾಗಿ ಕಳುಹಿಸಲಾಗುವುದು. ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಲಭ್ಯತೆಯ ಆಧಾರದಲ್ಲಿ ಎರಡು ಎಕರೆ ಜಮೀನು ನೀಡಿ ಅವರನ್ನು ಭೂಮಾಲೀಕರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಇಂದು ಪರಿಶಿಷ್ಟ ಜಾತಿ, ಪಂಗಡ, ಬುಡಕಟ್ಟು ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಶೇ.50ರಷ್ಟು ಪ್ರಗತಿ ಸಾಧಿಸಿದೆ. ಒಟ್ಟು 18 ಇಲಾಖೆಗಳ ಅಧಿಕಾರಿಗಳು ಇಂದಿನ ಸಭೆಯಲ್ಲಿ ಭಾಗವಹಿಸಿದ್ದಾರೆ. ಯೋಜನೆಯಡಿ ಒಟ್ಟು 19 ಸಾವಿರದ 542 ಕೋಟಿ ರೂ. ಮೀಸಲಿಡಲಾಗಿದೆ. ಪ್ರತಿ ಎರಡು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ. ಕ್ರಿಯಾ ಯೋಜನೆಗೆ ಜುಲೈ 15ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಪರಿಷತ್ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಮುಂದಿನ ಮಾರ್ಚ್ ತಿಂಗಳೊಳಗೆ ಈ ಯೋಜನೆಯಡಿ ಮೀಸಲಿಟ್ಟ ಹಣವನ್ನು ಖರ್ಚು ಮಾಡುವಂತೆ ಸೂಚನೆ ನೀಡಲಾಗಿದೆ. ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Comments are closed.