ಕರ್ನಾಟಕ

ನಿವೃತ್ತ ಐ‌ಎ‌ಎಸ್ ಅಧಿಕಾರಿ ಡಾ.ಸಿ. ಸೋಮಶೇಖರ್ ಬಿಜೆಪಿಗೆ ಸೇರ್ಪಡೆ

Pinterest LinkedIn Tumblr

ananth

ಬೆಂಗಳೂರು, ಅ. ೬- ನಿವೃತ್ತ ಐ‌ಎ‌ಎಸ್ ಅಧಿಕಾರಿ ಡಾ.ಸಿ. ಸೋಮಶೇಖರ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸೋಮಶೇಖರ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತ್ ಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಐಎ‌ಎಸ್ ಅಧಿಕಾರಿಯಾಗಿ ಒಳ್ಳೆಯ ಕೆಲಸ ಮಾಡಿರುವ ಸಿ. ಸೋಮಶೇಖರ್ ಸಾಹಿತ್ಯ ವಲಯದಲ್ಲೂ ಹೆಸರು ಮಾಡಿದ್ದಾರೆ. ಪಕ್ಷಕ್ಕೆ ಇವರ ಸೇರ್ಪಡೆಯಿಂದ ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಸೋಮಶೇಖರ್ ಅವರು, ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮುಂಬರುವ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರನ್ನು ಹುರಿದುಂಬಿಸಬೇಕೆಂದು ಯಡಿಯೂರಪ್ಪ ಸಲಹೆ ಮಾಡಿದರು.

ಕೇಂದ್ರ ಸಚಿವ ಅನಂತ್ ಕುಮಾರ್ ಮಾತನಾಡಿ, ಸೋಮಶೇಖರ್ ಬಹಳ ಹಿಂದೆಯೇ ಬಿಜೆಪಿ ಸೇರಬೇಕಾಗಿತ್ತು. ತಡವಾಗಿಯಾದರೂ, ಈಗ ಪಕ್ಷಕ್ಕೆ ಸೇರಿದ್ದಾರೆ. ಇದರಿಂದ ಪಕ್ಷ ಸಂಘಟನೆಗೆ ಒಳಿತಾಗಲಿದೆ ಎಂದರು.

ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರಿದ್ದೇನೆ. ಪಕ್ಷದ ಸಂಘಟನೆಗೆ ಕಾಯಾ-ವಾಚಾ-ಮನಸಾ ಶ್ರಮಿಸುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಆಶಯದಂತೆ ಮುಂಬರುವ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುದಾಗಿ ಸೋಮಶೇಖರ್ ಹೇಳಿದರು.

ರಾಜ್ಯಾದ್ಯಂತ ಪ್ರವಾಸ ಮಾಡುವ ಉದ್ದೇಶ ಹೊಂದಿದ್ದು, ಪಕ್ಷದ ಕಾರ್ಯಕರ್ತರನ್ನು ಸಂಘಟಿಸಲು ಸಮರ್ಪಣಾಭಾವದಿಂದ ಕೆಲಸ ಮಾಡುವುದಾಗಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Comments are closed.