ಕಲಬುರಗಿ, ಅ. 13: ಕರ್ನಾಟಕದ ಮಹದಾಯಿ ನದಿ ನೀರು ಹಂಚಿಕೆ ವಿಚಾರ ಕುರಿತು ಮೂರು ರಾಜ್ಯದ ಮುಖ್ಯಮಂತ್ರಿಗಳ ಸಂಧಾನ ಸಭೆ ನಡೆಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಧಾನ ಮಂತ್ರಿಗಳೇ ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥ ಮಾಡಬೇಕು ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು
ಅಭಿಪ್ರಾಯ ಪಟ್ಟರು.
ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು
ಸ್ಥಾನಮಾನಗಳಲ್ಲಿ ಸಮಾನವಾಗಿದ್ದಾರೆ. ಸಮಾನವಾಗಿರುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬೇಕು. ನೀರಿನ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ಮೂರು ರಾಜ್ಯಗಳ ಜನತೆಯ ಹಿತಕ್ಕಾಗಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಪರಿಕ್ಕರ್ ಹೇಳಿಕೆಗೆ ಅಸಮಾಧಾನ:
ರಕ್ಷಣಾ ಸಚಿವರಾದ ಮನೋಹರ ಪರಿಕ್ಕರ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚಿಗೆ ನಡೆದ ಸರ್ಜಿಕಲ್ ಸ್ಟ್ರೈಕ್ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕಾರಣ ಎಂದು ಹೇಳಿಕೆ ನೀಡಿ ಸೈನಿಕರ ಅವಮಾನಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿ, ದೇಶದ ಒಬ್ಬ ರಕ್ಷಣಾ ಸಚಿವರಾಗಿ ಇಂತಹ ಹೇಳಿಕೆ ನೀಡುತ್ತಿರುವುದು ಯಾವೊಬ್ಬ ಭಾರತೀಯನಿಗೆ ಸರಿಯನ್ನಿಸುವುದಿಲ್ಲ. ರಕ್ಷಣಾ ಸಚಿವರಾಗಿ ಇಂತಹ ಹೇಳಿಕೆ ನೀಡುವುದು ನಿಲ್ಲಿಸಬೇಕು ಎಂದರು.
ಚುನಾವಣೆಯ ಪ್ರಚಾರದಲ್ಲಿ ಭಾರತೀಯ ಸೈನಿಕರ ಭಾವಚಿತ್ರ ಬಳಸಿಕೊಂಡು ಪೋಸ್ಟರ್ ಅಂಟಿಸುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಉಗ್ರಗಾಮಿಗಳನ್ನು ಹೊಡೆದು ಉರುಳಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲವಿದೆ. ಸರ್ಜಿಕಲ್ ಸ್ಟ್ರೈಕ್ ರಾಜಕೀಯವಾಗಿ ಬಳಸಿಕೊಳ್ಳಲು ಭಾರತೀಯ ಜನತಾಪಕ್ಷ ಹವಣಿಸುತ್ತಿರುವದು ಸರಿಯಲ್ಲ. ಎಲ್ಲಾ ಮೋದಿಯವರೇ ಮಾಡಿದ್ದಾರೆ ಎನ್ನುವ ಅರ್ಥದಲ್ಲಿ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಮಾತನಾಡುತ್ತಿರುವುದು ಸೈನಿಕರಿಗೆ,
ಸೇನಾಧಿಕಾರಿಗಳಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಡಾ. ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.
ಗುಜರಾತ್ ಸಿಎಂ ಅಲ್ಲ ಮೋದಿ:
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇನ್ನೂ ತಾವು ಗುಜರಾತ್ ಮುಖ್ಯಮಂತ್ರಿಗಳಂತೆ ವರ್ತಿಸುತ್ತಿದ್ದಾರೆ. ಅವರು ಈ ದೇಶದ ಪ್ರಧಾನ ಮಂತ್ರಿಯಾಗಿದ್ದಾರೆ. ದೇಶದ ಆಡಳಿತ ಚುಕ್ಕಾಣಿ ಹಿಡಿದು ಮುನ್ನಡೆಸಲು ಅವರಿಂದಾಗುತ್ತಿಲ್ಲ ಎಂದು ಟೀಕಿಸಿದರು.
ಮಾಜಿ ಸಚಿವ ಹಾಲಿ ಶಾಸಕ ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಹೇಳಿಕೆ ಅವರ ವೈಯಕ್ತಿಕವಾಗಿದ್ದು ಅದು ಅವರ ವಿವೇಚನೆಗೆ ಬಿಟ್ಟಿದ್ದು, ಅವರು ತಮ್ಮ ಬಗ್ಗೆ ಹೇಳಿಕೆ ನೀಡಿರುವುದರ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.