ಕರ್ನಾಟಕ

ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ದಲಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ

Pinterest LinkedIn Tumblr

typing-on-laptopಬೆಂಗಳೂರು, ನ. ೨- ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟದ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಟೆಂಡರ್‌ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಇಂದಿಲ್ಲಿ ತಿಳಿಸಿದರು.

ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ ಪದವಿ, ಸ್ನಾತಕೋತ್ತರ, ಪಿಹೆಚ್‌ಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು ಎಂದು ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

ಈ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಜಾರಿಯಲ್ಲಿರುವ ವಿಶೇಷ ಘಟಕ ಯೋಜನೆಯಡಿಯಲ್ಲಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುವುದು. ಸಿಇಟಿ ಮೂಲಕ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೂ ಈ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುವುದು ಎಂದರು.

ಈ ಸಮುದಾಯಗಳ ಅಭಿವೃದ್ಧಿಗಾಗಿ ಈ ವರ್ಷದ ಬಜೆಟ್‌ನಲ್ಲಿ ವಿಶೇಷ ಘಟಕ ಯೋಜನೆಯಡಿ ಮೀಸಲಿಟ್ಟಿರುವ 19 ಸಾವಿರ ಕೋಟಿ ಹಣವನ್ನು ಸಂಪೂರ್ಣವಾಗಿ ಮಾರ್ಚ್‌ ವೇಳೆಗೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಹಣವನ್ನು ಫಲಾನುಭವಿಗಳಿಗೆ ತಲುಪಿಸುವಂತೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾಲಕ್ಕೆ ಜಾರಿಗೆ ತರುವಂತೆ ಸೂಚಿಸಲಾಗಿದೆ. ಒಂದು ವೇಳೆ ಅಲ್ಪಪ್ರಮಾಣದ ಹಣ ಉಳಿದರೆ ಮುಂದಿನ ವರ್ಷಕ್ಕೆ ಅದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಶಿಕ್ಷಣ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಇಲಾಖೆ ಮುಂತಾದ ಇಲಾಖೆಗಳಿಗೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದ್ದು, ಅದರಂತೆ ಹಣ ಖರ್ಚು ಮಾಡಲು ಸೂಚಿಸಲಾಗಿದೆ ಎಂದರು.

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾವ್ಯಾವ ಇಲಾಖೆಯಲ್ಲಿ ಭರ್ತಿಯಾಗಿಲ್ಲ ಎಂಬುದರ ಬಗ್ಗೆ ಶೀಘ್ರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದುಳಿದ ವರ್ಗಗಳ ಆಯೋಗ ಜಾತಿಗಣತಿ ಕುರಿತು ನಡೆಸಿರುವ ಸಮೀಕ್ಷಾ ವರದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಂಗಳ ಕೊನೆಯಲ್ಲಿ ಪುನರ್ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ವರದಿ ಹಿಂದುಳಿದ ವರ್ಗಗಳಿಗೆ ಒಂದು ಕೈಗನ್ನಡಿಯಾಗಲಿದ್ದು, ಬರುವ ಮಾರ್ಚ್ ವೇಳೆಗೆ ಈ ವರದಿಯನ್ನು ಸಿದ್ದಪಡಿಸಿ ಪ್ರಕಟಿಸಲಾಗುವುದು ಎಂದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಹಿರಿಯ ನಾಯಕ ಜನಾರ್ಧನ ಪೂಜಾರಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನಾರ್ಧನ ಪೂಜಾರಿರವರು ಪದೇ ಪದೇ ಈ ರೀತಿ ಹೇಳುತ್ತಲೇ ಇದ್ದಾರೆ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನಾವು ಹೇಳುತ್ತಲೇ ಇದ್ದೇವೆ ಎಂದು ಚುಟುಕಾಗಿ ಉತ್ತರಿಸಿದರು.

Comments are closed.