ಕರ್ನಾಟಕ

ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನಾ ಜಾಥಾ: ಶೋಭಾ ಕರಂದ್ಲಾಜೆ, ಪ್ರತಾಪಸಿಂಹ ಸೇರಿ ಹಲವರ ಬಂಧನ

Pinterest LinkedIn Tumblr

vashakkkeಮೈಸೂರು: ಟಿಪ್ಪು ಜಯಂತಿ ವಿರೋಧಿಸಿ ಆಯೋಜಿಸಲಾಗಿದ್ದ ಪ್ರತಿಭಟನಾ ಜಾಥಾಗೆ ಅನುಮತಿ ನಿರಾಕರಿಸಿದ ಬಳಿಕವೂ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಹೊರಟಿದ್ದ ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಸೇರಿ 20ಕ್ಕೂ ಹೆಚ್ಚು ಮಂದಿ ಬಿಜೆಪಿ ಮುಖಂಡರನ್ನು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ವತಿಯಿಂದ ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯ ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಹೊರಡಲು ಅಣಿಯಾದರು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.

ಚಾಮರಾಜ ವೃತ್ತದ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಮೆರವಣಿಗೆ ತಡೆದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ವಾಗ್ವಾದವೂ ನಡೆಯಿತು. ಬಳಿಕ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಸ್ಥಳದಿಂದ ಚದುರಿದ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು 20 ನಿಮಿಷಗಳ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದರು. ಈ ವೇಳೆ ಪ್ರತಿಭಟನಾಕಾರರು ‘ಕರ್ನಾಟಕ ಏಕೀಕರಣದ ವಜ್ರಮಹೋತ್ಸವ’ದ ಫ್ಲೆಕ್ಸ್‌ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಕೆಸರು ಎರಚಿ ಘೋಷಣೆ ಕೂಗಿದರು.

Comments are closed.