
ಬೆಂಗಳೂರು, ಜ. ೫- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದ ವಿವಿಧ ಕಡೆಗಳಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಮುಂದೆ ಅಪರಿಚಿತಱ್ಯಾರು ಪದವಿ ಕಾಲೇಜು ಕ್ಯಾಂಪಸ್‌ಗಳಿಗೆ ಕಾಲಿಟ್ಟರೆ ಜೈಲಿಗೆ ಕಳುಹಿಸುವಂತಹ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಪರಿಚಿತರು ಪೂರ್ವಾನುಮತಿಯಿಲ್ಲದೆ ಕಾಲೇಜು ಕ್ಯಾಂಪಸ್‌ಗಳಿಗೆ ಪ್ರವೇಶಿಸಿದರೆ ಜೈಲುಶಿಕ್ಷೆಗೆ ಗುರಿಪಡಿಸುವ ಕಾನೂನನ್ನು ಹೊರಡಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಡಾ. ಅಜಯ್ ನಾಗಭೂಷಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದಂತಹ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕೆಂದು ಕಾಲೇಜುಗಳಿಗೆ ಸೂಚಿಸಲಾಗಿದೆ.
ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಾಂಶುಪಾಲರ ಪೂರ್ವಾನುಮತಿ ಪಡೆಯದೆ ಕ್ಯಾಂಪಸ್‌ಗಳಿಗೆ ಅಪರಿಚಿತರು ಬರದಂತೆ ಎಚ್ಚರ ವಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.
ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಿಸಿಟಿವಿ ಕ್ಯಾಮರಾ ಮತ್ತಿತರ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಹಲವಾರು ಸರ್ಕಾರಿ ಕಾಲೇಜುಗಳಿಗೆ ಕಾಂಪೌಂಡ್‌ಗಳೇ ಇರುವುದಿಲ್ಲ. ಯಾರು ಬೇಕಾದರೂ ಕಾಲೇಜು ಒಳಗೆ ಪ್ರವೇಶಿಸಬಹುದಾಗಿರುತ್ತದೆ. ಇನ್ನು ಮುಂದೆ ಇಂತಹುದಕ್ಕೆ ಅವಕಾಶ ನೀಡಬಾರದು. ಕಾಲೇಜುಗಳ ಸುತ್ತಮುತ್ತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕು ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ 411 ಸರ್ಕಾರಿ ಪದವಿ ಕಾಲೇಜುಗಳಿದ್ದು, 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಸುಮಾರು 2 ಲಕ್ಷದಷ್ಟು ವಿದ್ಯಾರ್ಥಿನಿಯರು ಇದ್ದಾರೆ ಎಂದು ಹೇಳಲಾಗಿದೆ.
ಖಾಸಗಿ ಕಾಲೇಜುಗಳಲ್ಲಿ ಅಲ್ಲಿನ ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸಲು ಹಲವು ಬಗೆಯ ಕಾರ್ಯಕ್ರಮಗಳನ್ನು ರೂಪಿಸಿರುತ್ತಾರೆ. ಆದರೆ ಸರ್ಕಾರಿ ಕಾಲೇಜುಗಳಲ್ಲಿ ಇಂತಹ ವ್ಯವಸ್ಥೆ ಎಲ್ಲಾ ಕಡೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳು ಇನ್ನು ಮುಂದೆ ಕಾಲೇಜು ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಹೊಂದಿರಬೇಕು ಎಂಬ ಷರತ್ತನ್ನು ವಿಧಿಸಲಾಗುವುದು.
ಕರ್ನಾಟಕ
Comments are closed.