ಕರ್ನಾಟಕ

ಸಚಿವ ಜಾರಕಿಹೊಳಿ ನಿವಾಸದ ಮೇಲೆ ಐಟಿ ದಾಳಿ

Pinterest LinkedIn Tumblr


ಬೆಳಗಾವಿ, ಜ. ೧೯- ಸಚಿವ ರಮೇಶ್ ಜಾರಕಿಹೊಳಿ ಹಾಗೂ ಅವರ ಸಹೋದರ ಲಕನ ಜಾರಕಿಹೊಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್‌ಕರ್, ಕಾಂಗ್ರೆಸ್ ಮುಖಂಡ ಜಾವೇದ್ ಮುಲ್ಲ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಿಢೀರನೆ ನಿವಾಸ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಮುಖಂಡರಿಗೆ ಶಾಕ್ ನೀಡಿದ್ದಾರೆ.

ಗೋಕಾಕ್ ನಗರದಲ್ಲಿರುವ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ, ಅವರ ಸಹೋದರ ಲಕನ ಜಾರಕಿಹೊಳಿ ಅವರ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಗೋಕಾಕ್ ನಗರದ ಮುಲ್ಲಾ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಹೆಬ್ಬಾಳ್‌ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ತೆರಿಗೆ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ, ನಾಲ್ವರು ಕಾಂಗ್ರೆಸ್ ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರು, ಮುಖಂಡರು, ಗುಂಪುಗೂಡಿ ಮಾತನಾಡಿಕೊಳ್ಳುತ್ತಿದ್ದುದು ಕಂಡುಬಂತು.

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಏನೆಲ್ಲಾ ವಶಪಡಿಸಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಇನ್ನೂ ಕೂಡ ತೆರಿಗೆ ಇಲಾಖೆಯ ಅಧಿಕಾರಿಗಳು ಶೋಧ ಹಾಗೂ ಪರಿಶೀಲನೆ ಮುಂದುವರೆಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್‌ಕರ್ ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಪ್ರಸ್ತುತ ಮಹಿಳಾ ಘಟಕದ ಅಧ್ಯಕ್ಷರಾಗಿದ್ದಾರೆ.

Comments are closed.