ಬೆಂಗಳೂರು: ರಾಜ್ಯ ಸರ್ಕಾರದ ಟಿಪ್ಪು ಜಯಂತಿ ಆಚರಣೆಗೆ ಹಿಂದೂಪರ ಸಂಘಟನೆಗಳ ವಿರೋಧ ಮುಂದುವರೆದಿರುವಂತೆಯೇ ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಅನಂತ ಕುಮಾರ್ ಹೆಗಡೆ ಅವರು, ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಸೇರಿಸುವುದು ಬೇಡ ಎಂದು ಹೇಳಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ಮುಂದಿನ ತಿಂಗಳು ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ತಮ್ಮ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಸಚಿವ ಅನಂತ ಕುಮಾರ್ ಹೆಗಡೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಕನ್ನಡದ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಸೇರಿಸದಂತೆ ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಹಿಂದಿನಿಂದಲೂ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ಸರ್ಕಾರ ಆಯೋಜಿಸಿರುವ “ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಕಾರಣದಿಂದಾಗಿ ನನ್ನ ಹೆಸರನ್ನು ಆಮಂತ್ರಣ ಪತ್ರದಲ್ಲಿ ಹಾಕಬೇಡಿ” ಎಂದು ಅವರು ತಮ್ಮ ಆಪ್ತ ಕಾರ್ಯದರ್ಶಿ ಮೂಲಕ ಪತ್ರ ರವಾನಿಸಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷವೂ ಅನಂತ್ ಕುಮಾರ್ ಹೆಗಡೆ ಅವರು ಟಿಪ್ಪು ಜಯಂತಿ ಆಚರಣೆಯ ಆಹ್ವಾನ ಪತ್ರದಲ್ಲಿ ಹೆಸರು ಹಾಕದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.
Comments are closed.