ಕರ್ನಾಟಕ

ಎಸ್ಎಸ್ಎಲ್‏ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Pinterest LinkedIn Tumblr


ಬೆಂಗಳೂರು: 2017-18ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಲಾಗಿದ್ದು, 2018ರ ಮಾರ್ಚ್‌ 23ರಿಂದ ಏಪ್ರಿಲ್ 4ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 16ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ಈ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಏಪ್ರಿಲ್ 30ರೊಳಗೆ ಫಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದರು.

ಈ ಬಾರಿ ಸುಮಾರು 9.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನಕ್ಕೆ 60 ಸಾವಿರ ಶಿಕ್ಷಕರ ಅಗತ್ಯವಿದೆ. ಇನ್ನು 7 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 30ರೊಳಗೆ ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಇದೇ ನವೆಂಬರ್ 24ರ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಅಂಚೆ ಮೂಲಕ ಕಳುಹಿಸುವಂತೆ ಕೋರಲಾಗಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

Comments are closed.