ಕರ್ನಾಟಕ

ಗೌರಿ ಲಂಕೇಶ್ ಹತ್ಯೆ: ರಹಸ್ಯ ಸ್ಥಳದಲ್ಲಿ ಮೂವರು ಶಂಕಿತರ ವಿಚಾರಣೆ?

Pinterest LinkedIn Tumblr

ಬೆಂಗಳೂರು: ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾನುವಾರ ಮೂವರು ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮಾಧ್ಯಮವೊಂದು ವರದಿ ಮಾಡಿರುವಂತೆ ಎಸ್ ಐಟಿ ಮುಖ್ಯಸ್ಥ ಬಿಕೆ ಸಿಂಗ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ಮೂವರು ಶಂಕಿತರನ್ನು ವಶಕ್ಕೆ ಪಡೆದು, ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಮಾಹಿತಿ ಸೋರಿಕೆಯಾದರೆ ತನಿಖೆ ಹಿನ್ನಡೆಯಾಗುತ್ತದೆ ಎಂಬ ಕಾರಣದಿಂದ ಈ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮಾಧ್ಯಮಗಳಲ್ಲಿ ಪ್ರಸಾರವಾದ ಶಂಕಿತರ ರೇಖಾಚಿತ್ರದ ಹಿನ್ನಲೆಯಲ್ಲಿ ಗದಗದಲ್ಲಿ ಸಾರ್ವಜನಿಕರು ಎಸ್ ಪಿ ಮಾಹಿತಿ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಗದಗ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

ಇನ್ನು ನಿನ್ನೆಯಷ್ಟೇ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಗೌರಿ ಹತ್ಯೆ ಸಂಬಂಧ ಖಚಿತ ಮಾಹಿತಿ ದೊರೆತಿದ್ದು, ಶೀಘ್ರದಲ್ಲೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು. ಇದಾದ ಕೇವಲ 24 ಗಂಟೆಗಳ ಅವಧಿಯಲ್ಲಿ ಅಧಿಕಾರಿಗಳು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ.

Comments are closed.